ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2019-11-25 17:29 GMT

ಬೆಂಗಳೂರು, ನ.25: ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದರೂ ಚುನಾವಣಾ ಆಯೋಗ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಚುನಾವಣಾ ಆಯೋಗದ ಎದುರು ಪ್ರತಿಭಟನೆ ನಡೆಸಿದರು.

ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ಜಮಾಯಿಸಿದ್ದ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು, ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ, ಗೃಹ ಸಚಿವ ಸೇರಿದಂತೆ ಹಲವು ಪ್ರಮುಖ ನಾಯಕರುಗಳೇ ಚುನಾವಣಾ ಅಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದು ವರದಿಯಾಗುತ್ತಿದೆ. ಆದರೆ, ಚುನಾವಣಾ ಆಯೋಗಕ್ಕೆ ಈ ಸಂಬಂಧ ದೂರು ನೀಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಮಾತನಾಡಿ, ಸಿಎಂ ಯಡಿಯೂರಪ್ಪ ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದರೆ ಲಿಂಗಾಯತರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು ಎಂದಿದ್ದಾರೆ. ಇದು ನೀತಿ ಸಂಹಿತೆ ಅಡಿಯಲ್ಲಿ ಬರುವುದಿಲ್ಲವಾ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರು ಹಲವು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸೇರಿ ಹಂಚಿಕೆ ಮಾಡುವ ಮೂಲಕ ಮತದಾರರಿಗೆ ಆಮಿಷವನ್ನೊಡ್ಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಒಂದು ಪಕ್ಷದ ಅಭ್ಯರ್ಥಿಗಳಿಗೆ ಆಮಿಷವೊಡ್ಡಿ ನಾಮಪತ್ರಗಳನ್ನೇ ಹಿಂಪಡೆಯುವಂತೆ ಮಾಡಿದ್ದಾರೆ. ಈ ಸಂಬಂಧ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಬಿಬಿಎಂಪಿ ಮಾಜಿ ಮೇಯರ್ ಎಂ.ರಾಮಚಂದ್ರಪ್ಪ ಮಾತನಾಡಿ, ಅನರ್ಹ ಶಾಸಕರು ಆಮಿಷಗಳಿಗೆ ಬಲಿಯಾಗಿ ಮೈತ್ರಿ ಸರಕಾರಕ್ಕೆ ದ್ರೋಹ ಬಗೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಅನಗತ್ಯವಾಗಿ ಚುನಾವಣೆಯನ್ನು ಜನರ ಮೇಲೆ ಹೇರಿದ್ದಾರೆ. ಆ ಕ್ಷೇತ್ರದ ಮತದಾರರು ಇಂತಹವರನ್ನು ಸೋಲಿಸುವ ಮೂಲಕ ಸರಿಯಾದ ಪಾಠ ಕಲಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಕೃಷ್ಣಪ್ಪ, ಎಸ್.ಮನೋಹರ್, ಸೂರ್ಯ ಮುಕುಂದರಾಜ್, ಜನಾರ್ದನ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News