ಗೃಹ ಇಲಾಖೆ ಎಸಿಎಸ್, ಡಿಜಿ-ಐಜಿಪಿಗೆ ಹೈಕೋರ್ಟ್ ನೋಟಿಸ್: ಕಾರಣ ಏನು ಗೊತ್ತೇ ?
ಬೆಂಗಳೂರು, ನ.25: ಸಾರ್ವಜನಿಕರು ನೀಡುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸುವಾಗ ಪೊಲೀಸ್ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಬೇಕೆಂಬ ಆದೇಶವನ್ನು ಪಾಲಿಸದ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿ ಎಲ್ಲ ಪ್ರತಿವಾದಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ, ಈ ಕುರಿತು ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.
ಈ ಕುರಿತಂತೆ ವಕೀಲ ಎಸ್.ಉಮಾಪತಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿತು.
ಸಾರ್ವಜನಿಕರು ದೂರು ದಾಖಲಿಸಲು ಬಂದಾಗ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ಅಧಿಸೂಚನೆ ಮೂಲಕ ನಿರ್ದೇಶಿಸಬೇಕು. ಈ ಬಗ್ಗೆ ಸಾರ್ವಜನಿಕರು ಹಾಗೂ ಪೊಲೀಸರಲ್ಲಿ ವ್ಯಾಪಕ ತಿಳಿವಳಿಕೆ ಮೂಡಿಸಬೇಕು. ಠಾಣಾ ವ್ಯಾಪ್ತಿ ನೆಪ ಹೇಳಿ ಎಫ್‌ಐಆರ್ ದಾಖಲಿಸಿಕೊಳ್ಳಲು ನಿರಾಕರಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಆದರೆ, ಈ ಆದೇಶವನ್ನು ಇಲ್ಲಿಯವರೆಗೆ ಪಾಲಿಸಿಲ್ಲ ಎಂದು ಅರ್ಜಿದಾರ ವಕೀಲ ಎಸ್.ಉಮಾಪತಿ ಪೀಠಕ್ಕೆ ತಿಳಿಸಿದರು.
ನ್ಯಾಯಪೀಠವು ಕೋರ್ಟ್‌ನ ಆದೇಶವನ್ನು ಯಾಕೆ ಪಾಲಿಸಿಲ್ಲ ಎಂಬ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ, ಗೃಹ ಇಲಾಖೆಯ ಎಸಿಎಸ್ ರಜಿನೀಶ್ ಗೋಯಲ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತು. ಎಫ್‌ಐಆರ್ ದಾಖಲಿಸಿಕೊಳ್ಳುವ ಸಂಬಂಧ ಸುಪ್ರೀಂಕೋರ್ಟ್ ಹಾಗೂ ದೇಶದ ಇತರ ಹೈಕೋರ್ಟ್‌ಗಳ ತೀರ್ಪುಗಳು ಹಾಗೂ ಕೇಂದ್ರ ಸರಕಾರದ ಸುತ್ತೋಲೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಗೃಹ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳುವ ವೇಳೆ ಪೊಲೀಸ್ ಠಾಣಾ ವ್ಯಾಪ್ತಿ ಕೇಳದಂತೆ ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಕೇಂದ್ರ ಸರಕಾರ ಸಹ ಈ ಬಗ್ಗೆ ಹಲವು ಬಾರಿ ಸುತ್ತೋಲೆ ಹೊರಡಿಸಿದೆ. ಆದರೂ ರಾಜ್ಯದಲ್ಲಿ ಅದನ್ನು ಜಾರಿಗೆ ತರಲಾಗಿಲ್ಲ ಎಂದು ದೂರಲಾಗಿತ್ತು.