ಅನಧಿಕೃತ ಕಟ್ಟಡಗಳ ತೆರವಿಗೆ ಹೈಕೋರ್ಟ್ ಆದೇಶ
Update: 2019-11-25 23:56 IST
ಬೆಂಗಳೂರು, ನ.25: ನಗರದಲ್ಲಿನ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕು ಹಾಗೂ ಈ ಬಗ್ಗೆ ಸಮೀಕ್ಷೆ ನಡೆಸಿ, ಯೋಜನೆ ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರ, ಬಿಬಿಎಂಪಿಗೆ ನಿರ್ದೇಶಿಸಿದೆ.
ಅನಧಿಕೃತ ಕಟ್ಟಡಗಳ ತೆರವು ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಯಮಾವಳಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡ, ಅಕ್ರಮ ಕಟ್ಟಡ, ನಕ್ಷೆ ಇಲ್ಲದ ಕಟ್ಟಡಗಳನ್ನು ನೆಲಸಮಗೊಳಿಸಿ, ಇದಕ್ಕಾಗಿ ಸರಕಾರ ಸಿಬ್ಬಂದಿ ಹಾಗೂ ಅಗತ್ಯ ಸಂಪನ್ಮೂಲ ಒದಗಿಸಲು ನ್ಯಾಯಪೀಠವು ರಾಜ್ಯ ಸರಕಾರಕ್ಕೆ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ವರದಿಯನ್ನು ಡಿ.18ಕ್ಕೆ ಸಲ್ಲಿಸಲು ಸೂಚಿಸಿದೆ.