ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹ
ಉಡುಪಿ, ನ.26: ಕರ್ವಾಲು ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರು ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಎಸ್‌ಐಓ ನಿಯೋಗ ಇಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದೆ.
ಗಂಗೊಳ್ಳಿಯಲ್ಲಿ ವಾಹನ ಅಫಘಾತಗೊಂಡು ವಿದ್ಯಾರ್ಥಿಗಳು ಅಸುನೀಗಿದ ಪ್ರಕರಣ ನಿದರ್ಶನವಾಗಿರುವಾಗ ಇನ್ನು ಕೂಡ ವಾಹನದಲ್ಲಿ ಲೆಕ್ಕಕಿಂತ ಹೆಚ್ಚು ಮಕ್ಕಳನ್ನು ತುಂಬಿಸಿಕೊಂಡು ಹೋಗುತ್ತಿರುವುದು ಖೇದಕರ. ಈ ಬಗ್ಗೆ ಶಿಕ್ಷಣ ಇಲಾಖೆಯ ಶಾಲೆಗಳಿಗೆ ಮಾರ್ಗದರ್ಶಿ ಸೂಚನೆಗಳನ್ನು ಹೊರಡಿಸಿ ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿಯನ್ನು ಇಲಾಖೆಯ ಉಪ ನಿರ್ದೇಶಕ ಶೇಷಶಯನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಎಸ್ಐಓ ಜಿಲ್ಲಾಧ್ಯಕ್ಷ ಅಫ್ವಾನ್ ಹೂಡೆ, ಕಾರ್ಯದರ್ಶಿ ಶಾರೂಕ್ ತೀರ್ಥಹಳ್ಳಿ, ಸದಸ್ಯರಾದ ನಿಹಾಲ್, ಫೈಝ್ ಖತೀಬ್ ಮೊದಲಾದ ವರು ಉಪಸ್ಥಿತರಿದ್ದರು.