ಮಹಾರಾಷ್ಟ್ರ ಬೆಳವಣಿಗೆ ಬಿಜೆಪಿಗೆ ಕಪಾಳಮೋಕ್ಷ: ವಿಪಕ್ಷ ನಾಯಕ ಸಿದ್ದರಾಮಯ್ಯ

Update: 2019-11-27 13:27 GMT

ಬೆಂಗಳೂರು, ನ. 27: ‘ಮಹಾರಾಷ್ಟ್ರ ರಾಜ್ಯದಲ್ಲಿನ ಪ್ರಸಕ್ತ ಬೆಳವಣಿಗೆಗಳು ಬಿಜೆಪಿ ಪಾಲಿಗೆ ಕಪಾಳಮೋಕ್ಷ’ ಎಂದು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಗೆ ಬಹುಮತ ಇಲ್ಲ ಎಂದು ಗೊತ್ತಿದ್ದೂ ದೇವೆಂದ್ರ ಫಡ್ನವೀಸ್ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು ಹೇಗೆ? ಎಂದು ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದರು.

ಇದು ಸಂವಿಧಾನದ ಸ್ಪಷ್ಟ ಉಲ್ಲಂಘನೆ. ಪ್ರಜಾಪ್ರಭುತ್ವಕ್ಕೆ ಅವಮಾನಿಸಿದ ಈ ಘಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯೂ ಪಾಲ್ಗೊಂಡಿದ್ದಾರೆ. ಇದರಲ್ಲಿ ಅವರ ಕೈವಾಡವೂ ಇದೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತೀವ್ರ ವಾಗ್ದಾಳಿ ನಡೆಸಿದರು.

ಕರ್ನಾಟಕದ ಹದಿನೈದು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಅಕ್ರಮ ಎಸಗುತ್ತಿದೆ ಎಂದು ದೂರಿದ ಅವರು, ಬಿಜೆಪಿ ಮತದಾರರಿಗೆ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮಗೆ ಅವರೊಂದಿಗೆ ಸ್ಪರ್ಧೆ ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News