ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಹೆಸರು ಫೈನಲ್

Update: 2019-11-27 17:06 GMT

ಬೆಂಗಳೂರು, ನ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿ.12ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕೆ.ಸಿ.ರಾಮಮೂರ್ತಿಯನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಪ್ರಕಟಿಸಲಾಗಿದೆ.

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ, ಅಕ್ಟೋಬರ್ ತಿಂಗಳಲ್ಲಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದರು. ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇದೀಗ ಉಪ ಚುನಾವಣೆ ನಡೆಯುತ್ತಿದೆ. ಇವರ ಅಧಿಕಾರವಧಿ 2022ರ ಜೂನ್ 30ರವರೆಗೆ ಇತ್ತು. ರಾಜ್ಯಸಭಾ ಉಪ ಚುನಾವಣೆಗೆ ನವೆಂಬರ್ 25ರಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಡಿ.2ರವರೆಗೆ ಅವಕಾಶವಿದೆ. ಡಿ.3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ.5ರವರೆಗೆ ನಾಮಪತ್ರ ಹಿಂಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಡಿ.12ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಯ ನಂತರ ಮತಗಳ ಎಣಿಕೆ ಕಾರ್ಯ ನಡೆಸಿದ ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ.

ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ತಮಿಳುನಾಡಿನ ಮೆಟ್ಟೂರು ತಾಲೂಕಿನ ಡಾ.ಕೆ.ಪದ್ಮರಾಜನ್ ಹಾಗೂ ವಿಜಯಪುರದ ವೆಂಕಟೇಶ್ವರ ಮಹಾ ಸ್ವಾಮೀಜಿ ಯಾನೆ ದೀಪಕ್ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News