ಸಿದ್ದರಾಮಯ್ಯ ಸಿಂಗಲ್ ಸ್ಟಾರ್: ಸಚಿವ ಶ್ರೀರಾಮುಲು
ರಾಣೆಬೆನ್ನೂರು, ನ.28: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ.
ಗುರುವಾರ ನಗರದ ಬಿಜೆಪಿ ಕಚೇರಿ ಎದುರು ಆಯೋಜಿಸಲಾಗಿದ್ದ ಎಸ್ಸಿ-ಎಸ್ಟಿ ಸಮುದಾಯದ ಬೃಹತ್ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪರವಾಗಿ ಮತ ಯಾಚನೆ ಮಾಡುತ್ತಾ ಅವರು ಮಾತನಾಡಿದರು.
ಕುಮಾರಸ್ವಾಮಿ ಮಾಡಿದ ನಿರ್ಲಕ್ಷದ ಆಡಳಿತದಿಂದ ಬೇಸತ್ತು, 17 ಮಂದಿ ಕಾಂಗ್ರೆಸ್, ಜೆಡಿಎಸ್ ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದರು. ಈ 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ, ಮತ್ತಷ್ಟು ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಶ್ರೀರಾಮುಲು ಹೇಳಿದರು.
ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಉಪ ಚುನಾವಣೆ ಬಳಿಕ ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಬೀಳಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ, ಇದೀಗ ಉಲ್ಟಾ ಹೊಡೆಯುತ್ತಿದ್ದು, ನಾನು ಯಾವ ಪಕ್ಷದ ಸರಕಾರ ಎಂದು ಹೇಳಿರಲಿಲ್ಲ ಎನ್ನುತ್ತಿದ್ದಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸಿಂಗಲ್ ಸ್ಟಾರ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಂಗಲ್ ಸ್ಟಾರ್, ಅವರ ಜೊತೆ ಯಾವ ಕಾಂಗ್ರೆಸ್ ನಾಯಕರು ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನು ತುಳಿದು ಸಿದ್ದರಾಮಯ್ಯ ಇವತ್ತು ಈ ಮಟ್ಟಕ್ಕೆ ಬೆಳೆದಿದ್ದಾರೆ ಎಂದು ಅವರು ಆರೋಪಿಸಿದರು.
ದಲಿತ ಸಮುದಾಯದ ನಾಯಕ ಡಾ.ಜಿ.ಪರಮೇಶ್ವರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಎಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು 2013ರ ಚುನಾವಣೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮುಂದೆ ನಿಂತು ಅವರನ್ನು ಚುನಾವಣೆಯಲ್ಲಿ ಸೋಲಿಸಿದರು ಎಂದು ಶ್ರೀರಾಮುಲು ದೂರಿದರು.
ರಾಜ್ಯದಲ್ಲಿ ಆರು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಏನು ಅನುಕೂಲ ಮಾಡಿಕೊಟ್ಟಿದ್ದಾರೆ? ಈ ವರ್ಗಗಳ ಅಭಿವೃದ್ಧಿಗೆ ಯಾವ ಯಾವ ಕಲ್ಯಾಣ ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತಂದಿದ್ದಾರೆ? ಅವುಗಳಿಂದ ಹಿಂದುಳಿದ ವರ್ಗಗಳಿಗೆ ಆಗಿರುವ ಲಾಭ ಏನು? ಎಂಬುದರ ಕುರಿತು ನನ್ನ ಜೊತೆ ಬಹಿರಂಗ ಚರ್ಚೆಗೆ ಬರಲಿ ಎಂದು ಸಿದ್ದರಾಮಯ್ಯಗೆ ಶ್ರೀರಾಮುಲು ಸವಾಲು ಹಾಕಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.