ಹನಿಟ್ರ್ಯಾಪ್ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಅಶ್ವಥ್ ನಾರಾಯಣ

Update: 2019-11-29 12:28 GMT

ಬೆಂಗಳೂರು, ಜ. 29: ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿಜೆಪಿ ಹಾಗೂ ಅನರ್ಹ ಶಾಸಕರ ಹೆಸರು ಕೇಳಿಬರುತ್ತಿದೆ ಎಂಬುದು ಕೇವಲ ಊಹಾಪೋಹ. ಹೀಗಾಗಿ ಅದಕ್ಕೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಲಾಗುತ್ತಿದೆ. ಈಗಾಗಲೇ ಬ್ಲಾಕ್‌ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸ್ಪಷ್ಟಣೆ ನೀಡಿದರು.

ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಆದರೆ, ಈ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಡಾ.ಅಶ್ವಥ್ ನಾರಾಯಣ ಸ್ಪಷ್ಟೀಕರಣ ನೀಡಿದರು.

ಸ್ಥಿರ ಸರಕಾರಕ್ಕೆ ಬೆಂಬಲ: ಉಪಚುನಾವಣೆ ನಡೆಯಲಿರುವ ಹದಿನೈದು ಕ್ಷೇತ್ರಗಳಲ್ಲಿಯೂ ಜನತೆ ಸ್ಥಿರ ಸರಕಾರಕ್ಕಾಗಿ ಬಿಜೆಪಿ ಬೆಂಬಲಿಸಲಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ವಿಪಕ್ಷಗಳಿಗೆ ಮತ ನೀಡಿದರೆ ಪ್ರಯೋಜನ ಇಲ್ಲ ಎಂಬುದು ಜನರಿಗೆ ಮನವರಿಕೆಯಾಗಿದೆ ಎಂದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯದ ಜನತೆಯಲ್ಲಿ ಗೊಂದಲ ಸೃಷ್ಟಿಸಲು ವಿಪಕ್ಷಗಳ ಮುಖಂಡರು ಯತ್ನಿಸುತ್ತಿದ್ದಾರೆ ಎಂದು ದೂರಿದ ಅವರು, ಹದಿನೈದು ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News