ರಾಜ್ಯ, ಕೇಂದ್ರ ಸರಕಾರದ ವಿರುದ್ಧ ರಾಮಲಿಂಗಾರೆಡ್ಡಿ ವಾಗ್ದಾಳಿ

Update: 2019-11-30 12:09 GMT

ಬೆಂಗಳೂರು, ನ.30: ಆಪರೇಷನ್ ಕಮಲಕ್ಕೆ ಬಲಿಯಾಗಿ ಪಕ್ಷಾಂತರ ಮಾಡಿರುವವರು ಮಹಾರಾಷ್ಟ್ರ, ಗುಜರಾತ್‌ನಲ್ಲಿ ನಡೆದ ಚುನಾವಣೆಯಲ್ಲಿ ಸೋತಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಅದೇ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಶನಿವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಯಾರೂ ಕೂಡ ಆಪರೇಷನ್ ಕಮಲಕ್ಕೆ ಬಲಿಯಾಗುವ ಸಾಹಸ ಮಾಡುವುದಿಲ್ಲ ಎಂದರು.

ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಾವು ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿ ಸರಕಾರ ಪತನವಾಗುತ್ತದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ನಾಯಕರು ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದರು. ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿಯನ್ನು ಸಮರ್ಥವಾಗಿ ಎದುರಿಸುವಂತಹ ಕೆಲಸವನ್ನು ಸರಕಾರ ಮಾಡಿಲ್ಲ. ಮಹಾರಾಷ್ಟ್ರದಲ್ಲಿಯೂ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ನೆರೆ ಸಂತ್ರಸ್ತರನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮ, ಚುನಾವಣೆಯಲ್ಲಿ ಅಲ್ಲಿನ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ 100ಕ್ಕಿಂತ ಹೆಚ್ಚು ಸ್ಥಾನಗಳನ್ನು ಹೊಂದಿರುವ ಬಿಜೆಪಿ ಶೇ.50ರಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ರಾಜ್ಯದಲ್ಲಿ ಅತಿವೃಷ್ಟಿ, ನೆರೆ ಹಾವಳಿ ಉಂಟಾಗಿ ಲಕ್ಷಾಂತರ ಜನ ಬೀದಿ ಪಾಲಾಗಿದ್ದಾರೆ. ಈವರೆಗೆ ಪ್ರಧಾನಿ ನೆರೆ ಪೀಡಿತ ಪ್ರದೇಶಗಳಿಗೆ ಬಂದು ಪರಿಸ್ಥಿತಿಯನ್ನು ಅವಲೋಕನ ಮಾಡಿಲ್ಲ ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.

ಜನ ಇವತ್ತು ಮೋದಿ ಆಡಳಿತದಿಂದಾಗಿ ಹತಾಶರಾಗಿದ್ದಾರೆ. ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ನೆರೆ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆ ನಡೆಸಿ ಹೋದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹರಿಯಾಣದಲ್ಲಿ ಅಯಾರಾಮ್ ಗಯಾರಾಮ್ ಇದ್ರು. ಆ ಹೆಸರನ್ನು ಮೋದಿ-ಅಮಿತ್ ಶಾ ಅವರಿಗೆ ಇಡಬೇಕು ಎಂದು ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು.

ಜನಸಾಮಾನ್ಯರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮೇಲಿರುವ ವಿಶ್ವಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಜಿಡಿಪಿ ದರ ಶೇ.4.5ಕ್ಕೆ ಕುಸಿದಿದೆ. ಆರ್ಥಿಕ ತಜ್ಞರ ಸಲಹೆ, ಸೂಚನೆಗಳನ್ನು ಪಡೆದಿದ್ದರೆ ದೇಶದ ಆರ್ಥಿಕ ಸ್ಥಿತಿ ಈ ಮಟ್ಟಕ್ಕೆ ಕುಸಿಯುತ್ತಿರಲಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೇ ಹೇಳಿದ್ದಾರೆ ಕೇಂದ್ರ ಸರಕಾರದ ಆರ್ಥಿಕ ನೀತಿ ಸರಿ ಎಂದಿದ್ದಾರೆ ಎಂದು ಅವರು ಹೇಳಿದರು.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದ ನರೇಂದ್ರ ಮೋದಿ, ಚುನಾವಣೆ ಸಂದರ್ಭದಲ್ಲಿ ನೀಡಿದ ಒಂದು ಭರವಸೆಯನ್ನು ಈಡೇರಿಸಿಲ್ಲ. ದೇಶದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿಲ್ಲ, ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದೆ. ಮುಂದಿನ ವರ್ಷ ಇನ್ನು ಮೂರು ಲಕ್ಷ ಉದ್ಯೋಗಗಳು ಕಡಿತವಾಗುತ್ತವೆ ಎಂದು ರತನ್ ಟಾಟಾ ಹೇಳಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 9 ಪ್ರಕರಣಗಳು ಕೇಳಿಬಂದಿವೆ. ಆದರೆ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೆ ಕ್ರಮ ಕೈಗೊಂಡಿಲ್ಲ. ಬಿಜೆಪಿಯ ಕೈ ಗೊಂಬೆಯ ರೀತಿಯಲ್ಲಿ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ. ಅದೇ ರೀತಿಯಲ್ಲಿ ರಿಸರ್ವ್ ಬ್ಯಾಂಕ್ ಕೂಡ ಇವರ ಕೈಗೊಂಬೆ ಆಗಿದೆ ಎಂದು ಅವರು ಆರೋಪಿಸಿದರು.

ಉಪ ಚುನಾವಣೆ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸಂಬಂಧ ನಡೆಯುತ್ತಿರುವ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಜೆಡಿಎಸ್ ವರಿಷ್ಠ ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆಗಳನ್ನು ನೀವೇ ಸೂಕ್ಷ್ಮವಾಗಿ ಗಮನಿಸಿ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗ ನಾನು ವಿರೋಧಿಸಿಲ್ಲ. ಮುಂದೆಯೂ ವಿರೋಧಿಸುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ವೀಕ್ಷಕ ಸಂಜೀವ್‌ರೆಡ್ಡಿ, ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News