ನ್ಯಾಯಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

Update: 2019-12-02 15:55 GMT

ಮಂಗಳೂರು, ಡಿ. 2: ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಹಾಗೂ ಐಐಟಿ ಮದ್ರಾಸ್ ವಿದ್ಯಾರ್ಥಿನಿ ಫಾತಿಮಾ ಲತೀಫಾಳ ಹತ್ಯೆಯ ವಿರುದ್ಧ  ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿತು.

ವಿದ್ಯಾರ್ಥಿನಿಯರು ಈ ಎರಡು ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರಲ್ಲದೆ ಘೋಷಣೆಗಳನ್ನು ಕೂಗಿದರು. ಅಲ್ಲದೆ ಭಿತ್ತಿಪತ್ರಗಳನ್ನು ಹಿಡಿದು ದುಷ್ಕರ್ಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸಮಿತಿ ಸದಸ್ಯೆ ಮಿಸ್ರಿಯಾ ಮಹಿಳೆಯರ ಮೇಲೆ ಮತ್ತು ವಿದ್ಯಾರ್ಥಿನಿ ಯರ ಮೇಲಿನ ದೌರ್ಜನ್ಯ ನಿರಂತರ ನಡೆಯುತ್ತಿರುವುದು ಖಂಡನೀಯ. ಸರಕಾರ ಮಹಿಳಾ ದೌರ್ಜನ್ಯ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಲ್ಲಿ ವಿಫಲವಾಗುತ್ತಿರುವುದು ವಿಪರ್ಯಾಸ. ದೇಶದಲ್ಲಿ ಮಹಿಳೆಯರು ಸ್ವತಂತ್ರರಾಗಿ ಜೀವಿಸಲು ಹೆದರುವಂತಹ ವಾತಾವರಣ ದೇಶದಲ್ಲಿ ನಿರ್ಮಾಣವಾಗುತ್ತಿದೆ. ಸರಕಾರ ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ರೂಪಿಸಬೇಕಾಗಿದೆ. ದೇಶದಲ್ಲಿ ನಡೆಯುತ್ತಿರುವ ಇಂತಹ ದುರ್ಘಟನೆಗಳ ವಿರುದ್ಧ ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟ ಮಾಡುವಂತಹ ಅನಿವಾರ್ಯತೆ ಬಂದೊದಗಿದೆ ಎಂದರು.

ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ದ.ಕ. ಜಿಲ್ಲಾ ಕಾರ್ಯದರ್ಶಿ ಮುರ್ಷಿದಾ ಮಾತನಾಡಿದರು. ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಸದಸ್ಯೆ ಅಮ್ರೀನ್ ನಾಝ್, ವಿದ್ಯಾರ್ಥಿನಿ ಜಸೀರಾ ಜನ್ನತ್ ಉಪಸ್ಥಿತರಿದ್ದರು. ಫಾತಿಮಾ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News