×
Ad

ಮತದಾರರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರ ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ಮೌನೀಶ್ ಮುದ್ಗಲ್

Update: 2019-12-03 21:20 IST

ಉಡುಪಿ, ಡಿ.3: ಜಿಲ್ಲೆಯ ಯಾವುದೇ ಅರ್ಹ ಮತದಾರ, ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ, ಮತದಾರರ ಪಟ್ಟಿಯ ಪರಿಶೀಲನೆ, ಸೇರ್ಪಡೆ ಹಾಗೂ ತಿದ್ದುಪಡಿಯನ್ನು ಮಾಡುವಂತೆ ಆಯುಕ್ತರು, ಭೂಮಾಪನ ಮತ್ತು ಪದ ನಿಮಿತ್ತ ನಿರ್ದೇಶಕರು ಭೂಮಿ ಹಾಗೂ ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಮೌನೀಶ್ ಮುದ್ಗಲ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ಗಳನ್ನು ಸೂಚಿಸಿದ್ದಾರೆ.

ಮಂಗಳವಾರ, ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಅವರು ಸಭೆಯನ್ನುದ್ದೇಶಿಸಿ ಮಾತನಾಡುತಿದ್ದರು.

ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಂತೆ ಎಲ್ಲಾ ರೀತಿಯ ಎಚ್ಚರ ವಹಿಸುವಂತೆ ಸೂಚಿಸಿದ ವೌನೀಶ್ ಮುದ್ಗಲ್, ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ವ್ಯಕ್ತಿಗಳ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗುವ ಪ್ರಕರಣಗಳು ಕಂಡು ಬರುತ್ತಿದ್ದು, ಜಿಲ್ಲೆಯ ಗಣ್ಯ ವ್ಯಕ್ತಿಗಳು, ಜಿಪಂ, ತಾಪಂ ಸದಸ್ಯರು ಸೇರಿದಂತೆ ಯಾವುದೇ ರಾಜಕೀಯ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವಂತೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಶೇ.100ರಷ್ಟು ಗುರಿ ಸಾಧಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News