ಉಪ ಚುನಾವಣೆ: ಡಿ.5ರಂದು ವೇತನ ಸಹಿತ ಸಾರ್ವತ್ರಿಕ ರಜೆ

Update: 2019-12-03 16:21 GMT

ಬೆಂಗಳೂರು,ಡಿ.3: ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುವ ಡಿ.5ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

15 ವಿಧಾನಸಭಾ ಕ್ಷೇತ್ರಗಳಾದ ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಕೆ.ಆರ್ ಪೇಟೆ, ಹಾಗೂ ಹುಣಸೂರಿನಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಸರಕಾರಿ, ಸಂಸ್ಥೆಗಳನ್ನು ಹೊರತುಪಡಿಸಿ ಉಪಚುನಾವಣೆ ನಡೆಯುತ್ತಿರುವ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಸರಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ ಘೋಷಿಸಿದೆ.

ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಖಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ಮಾಡುವ ನೌಕರರಿಗೂ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News