ಪಶುವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣ: ದಿಲ್ಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ

Update: 2019-12-03 16:33 GMT

ಹೊಸದಿಲ್ಲಿ, ಡಿ. 3: ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನವಾದ ಮಂಗಳವಾರ ಕೂಡ ಮುಂದುವರಿದಿದೆ.

 ಸೋಮವಾರ ಜಂತರ್‌ಮಂತರ್‌ನಲ್ಲಿ ಸಾರ್ವಜನಿಕರು ಸಭೆ ಸೇರಿ ಪಶು ವೈದ್ಯೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸಿದ್ದರು. ಕಾಂಗ್ರೆಸ್ ನಾಯಕಿ ಅಮೃತಾ ಧವನ್ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಸುಮಾರು 70ಕ್ಕೂ ಅಧಿಕ ನಾಗರಿಕರು ಬೀದಿಗಿಳಿದು ರ್ಯಾಲಿ ನಡೆಸಿದ್ದರು. ‘ನಮಗೆ ನ್ಯಾಯ ಬೇಕು’, ‘ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ’ ಮೊದಲಾದ ಘೋಷಣಾ ಫಲಕಗಳನ್ನು ಪ್ರದರ್ಶಿಸಿದ್ದರು.

ಈ ಪ್ರಕರಣದಲ್ಲಿ ಅಪರಾಧ ಸಾಬೀತಾದ 6 ತಿಂಗಳ ಒಳಗೆ ದೋಷಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ದಿಲ್ಲಿ ಮಹಿಳಾ ಆಯೋಗದ ವರಿಷ್ಠೆ ಸ್ವಾತಿ ಮಲಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಇತ್ತೀಚೆಗಿನ ಸಂಭವಿಸಿದ ಅತ್ಯಾಚಾರ ಪ್ರಕರಣಗಳ ವಿರುದ್ಧ ಜಂತರ್ ಮಂತರ್‌ನಲ್ಲಿ ಉಪವಾಸ ಮುಷ್ಕರ ನಡೆಸಲು ಅನುಮತಿ ನೀಡಲು ದಿಲ್ಲಿ ಪೊಲೀಸರು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪಶು ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಹೈದರಾಬಾದ್ ಹಾಗೂ ತೆಲಂಗಾಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮುಂದುವರಿದಿದೆ. ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ವಕೀಲರು ರ್ಯಾಲಿ ನಡೆಸಿ ಪ್ರಕರಣದ ದೋಷಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.

ಕೋಲ್ಕತ್ತಾ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದಲ್ಲಿ ಕೂಡ ಪ್ರತಿಭಟನೆ ನಡೆಯಿತು. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ದೋಷಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News