ಬುಧವಾರ ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ

Update: 2019-12-03 16:40 GMT

ಬೆಂಗಳೂರು, ಡಿ.3: ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಡಿ.4ರಂದು ಪುರಭವನದಲ್ಲಿ ನಡೆಯಲಿದ್ದು, ಅಂದು ಬೆಳಗ್ಗೆ 8:30ರಿಂದ 9:30ರವರೆಗೆ ನಾಮಪತ್ರ ಸಲ್ಲಿಕೆ ಹಾಗೂ 11:30ಕ್ಕೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಡಿ.5ರಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವ ಸಂದರ್ಭದಲ್ಲಿ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕ್ಷೇತ್ರ ತೊರೆಯುವುದು ಅನಿವಾರ್ಯ. ಮಾತ್ರವಲ್ಲ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಬಿಬಿಎಂಪಿಯ ಕೇಂದ್ರ ಕಚೇರಿ ಅದೇ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಪುರಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ತಿಳಿಸಿದ್ದಾರೆ.

ಸ್ಥಾಯಿ ಸಮಿತಿಗಳು: ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ, ಅಪೀಲು ಸ್ಥಾಯಿ ಸಮಿತಿ, ತೋಟಗಾರಿಕೆ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಆಡಳಿತ ಸುಧಾರಣಾ ಸ್ಥಾಯಿ ಸಮಿತಿ, ನಗರ ಯೋಜನೆ ಸ್ಥಾಯಿ ಸಮಿತಿ, ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ, ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ, ಶಿಕ್ಷಣ ಸ್ಥಾಯಿ ಸಮಿತಿ, ಆರೋಗ್ಯ ಸ್ಥಾಯಿ ಸಮಿತಿ, ಮಾರುಕಟ್ಟೆ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಮತ್ತು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

ಚುನಾವಣೆ ಮುಂದೂಡುವ ಸಾಧ್ಯತೆ: ಡಿ.5ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಡಿ.4ರಂದು ನಿಗದಿಯಾಗಿರುವ ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಕೋರಂ ಕೊರತೆಯಿಂದ ಮೂಂದೂಡಲ್ಪಡುವ ಸಾಧ್ಯತೆ ಇದೆ. ಉಪಚುನಾವಣೆಯಲ್ಲಿ ಪಾಲ್ಗೊಳ್ಳಬೇಕಾದ ಬಿಬಿಎಂಪಿ ಸದಸ್ಯರು ಬುಧವಾರ ನಡೆಯಲಿರುವ ಸ್ಥಾಯಿ ಸಮಿತಿ ಚುನಾವಣೆಗೆ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೋರಂ ಕೊರತೆ ಎದುರಾಗಿ ಚುನಾವಣೆ ಮುಂದೂಡುವ ಸಾಧ್ಯತೆ ಇದೆ. ಡಿ.12ರಂದು ಚುನಾವಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಪಾಲಿಕೆಯ ಕಾಂಗ್ರೆಸ್ ಸದಸ್ಯರಿಗೆ ಕೆಪಿಸಿಸಿ ಜವಾಬ್ದಾರಿ ನೀಡಿದೆ. ನಾವೆಲ್ಲರೂ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದೇವೆ. ಹೀಗಾಗಿ ಸ್ಥಾಯಿ ಸಮಿತಿ ಚುನಾವಣೆಯನ್ನು ಮುಂದೂಡುವಂತೆ ಪ್ರಾದೇಶಿಕ ಆಯುಕ್ತರಲ್ಲಿ ಮನವಿ ಮಾಡಿದ್ದೇವೆ. ಒಂದು ವೇಳೆ ಸ್ಥಾಯಿ ಸಮಿತಿಗಳಿಗೆ ಡಿ.4ರಂದೇ ಚುನಾವಣೆ ನಡೆದರೆ ನಾವು ಯಾರು ಸಹ ಭಾಗಿಯಾಗುವುದಿಲ್ಲ.

-ಅಬ್ದುಲ್ ವಾಜೀದ್, ಬಿಬಿಎಂಪಿ ಪ್ರತಿಪಕ್ಷ ನಾಯಕ

ಚುನಾವಣಾ ಆಯೋಗದ ಸೂಚನೆಯಂತೆ ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಡಿ.4ರಂದು ಚುನಾವಣೆ ನಿಗದಿ ಮಾಡಲಾಗಿದ್ದು, ಚುನಾವಣೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದೇವೆ. ಅಂದು ಬೆಳಗ್ಗೆ 8 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಪಾಲಿಕೆ ಸದಸ್ಯರು ನಾಮಪತ್ರ ಸಲ್ಲಿಸಿದರೆ ಚುನಾವಣೆ ಮಾಡುತ್ತೇವೆ. ಇಲ್ಲದಿದ್ದರೆ ಮಂದೂಡುತ್ತೇವೆ.

-ಹರ್ಷ ಗುಪ್ತ, ಪ್ರಾದೇಶಿಕ ಆಯುಕ್ತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News