ರಾಜಕೀಯ ದುರುದ್ದೇಶದಿಂದ ಚಿದಂಬರಂ ವಿರುದ್ಧ ಪ್ರಕರಣ: ಮಲ್ಲಿಕಾರ್ಜುನ ಖರ್ಗೆ

Update: 2019-12-04 15:42 GMT

ಬೆಂಗಳೂರು, ಡಿ.4: ಕೇಂದ್ರದ ಮಾಜಿ ಹಣಕಾಸು ಹಾಗೂ ಗೃಹ ಸಚಿವ ಪಿ.ಚಿದಂಬರಂ ವಿರುದ್ಧ ರಾಜಕೀಯ ದುರುದ್ದೇಶದಿಂದಾಗಿ ಐಎನ್‌ಎಕ್ಸ್ ಮೀಡಿಯಾ ಹಗರಣದ ಪ್ರಕರಣವನ್ನು ದಾಖಲಿಸಲಾಗಿತ್ತು ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನಿಂದ ಕೊನೆಗೂ ಚಿದಂಬರಂ ಅವರಿಗೆ ಜಾಮೀನು ಸಿಗುವ ಮೂಲಕ ಅವರ ಹೋರಾಟಕ್ಕೆ ಗೆಲುವು ಸಿಕ್ಕಿದೆ ಎಂದರು.

100 ದಿನಗಳಿಗಿಂತ ಹೆಚ್ಚಿನ ಅವಧಿಗೆ ಅವರು ಜೈಲು ವಾಸ ಅನುಭವಿಸುವಂತಾಯಿತು. ನ್ಯಾಯಾಲಯದಿಂದ ಜಾಮೀನಿನ ತೀರ್ಪು ಬಹಳ ವಿಳಂಬವಾಗಿ ಬಂದರೂ, ನಾನು ಅದನ್ನು ಸ್ವಾಗತಿಸುತ್ತೇನೆ. ಕೇಂದ್ರ ಸರಕಾರ ಕಾನೂನು ಹಾಗೂ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಲಿ, ಅದನ್ನು ಬಿಟ್ಟು ರಾಜಕೀಯ ದುರುದ್ದೇಶದಿಂದ ಪ್ರಕರಣಗಳನ್ನು ದಾಖಲಿಸುವುದನ್ನು ನಿಲ್ಲಿಸಲಿ ಎಂದು ಅವರು ವಾಗ್ದಾಳಿ ನಡೆಸಿದರು.

ಚಿದಂಬರಂ ಓರ್ವ ಆರ್ಥಿಕ ತಜ್ಞ, ರಾಜಕೀಯ ಧುರೀಣ ಮತ್ತು ಕಾನೂನು ತಜ್ಞ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರೇನು ಸಾಕ್ಷಗಳನ್ನು ನಾಶ ಮಾಡುವುದಿಲ್ಲ. ಚಿದಂಬರಂ ಉತ್ತಮ ವ್ಯಕ್ತಿತ್ವ ಹೊಂದಿದವರು ಎಂದು ನ್ಯಾಯಾಲಯವೇ ಹೇಳಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ರಾಜ್ಯದಲ್ಲಿ ನಾಳೆ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಯಾವ ರಣತಂತ್ರ ಅನುಸರಿಸಬೇಕು ಎಂಬುದರ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಎಲ್ಲ 15 ಕ್ಷೇತ್ರಗಳಲ್ಲೂ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಸಲು ಬಿಜೆಪಿಯವರು ಸಿದ್ಧತೆ ಮಾಡಿಕೊಳ್ಳುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಎಲ್ಲ ವಿಚಾರಗಳಿಗೆ ಡಿ.9ರಂದು ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಉತ್ತರ ಸಿಗಲಿದೆ. ಬಿಜೆಪಿ ಹಾಗೂ ಜೆಡಿಎಸ್ ಎಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದನ್ನು ನೋಡೋಣ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ನಮ್ಮ ರಾಜ್ಯದ ನಾಯಕರ ಜೊತೆ ದೂರವಾಣಿ ಮೂಲಕ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಮೈತ್ರಿ ಸರಕಾರ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಆರೋಪಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಎಸ್.ಎಂ.ಕೃಷ್ಣ ತುಂಬಾ ಒಳ್ಳೆಯ ಕೆಲಸ ಮಾಡಿ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಶುಭವಾಗಲಿ ಎಂದು ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News