ಉಪ ಲೋಕಾಯುಕ್ತರ ನೇಮಕ ಪ್ರಶ್ನಿಸಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-12-04 16:21 GMT

ಬೆಂಗಳೂರು, ಡಿ.4: ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ರವಿ ಮಳೀಮಠ್ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. 

ಉಪ ಲೋಕಾಯುಕ್ತರನ್ನು ನೇಮಕ ಮಾಡುವಾಗ ಮುಖ್ಯಮಂತ್ರಿಯವರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ವಿಧಾನ ಪರಿಷತ್ ಸಭಾಪತಿ, ವಿಧಾನಸಭೆಯ ಸ್ಪೀಕರ್, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರ ಜೊತೆಗೆ ಲಿಖಿತ ರೂಪದಲ್ಲಿ ಸಮಾಲೋಚಿಸಬೇಕು. ಅದರಂತೆ, ನ್ಯಾ.ಸುಭಾಷ್ ಬಿ. ಅಡಿಯವರ ನಿವೃತ್ತಿಯಿಂದ 2018ರ ಮಾ.1ರಂದು ಉಪ ಲೋಕಾಯುಕ್ತ ಹುದ್ದೆ ಖಾಲಿಯಾಗಿತ್ತು. ಆ ಜಾಗಕ್ಕೆ ಸೂಕ್ತ ವ್ಯಕ್ತಿಯನ್ನು ಸೂಚಿಸುವಂತೆ 2018ರ ಜು.24ರಂದು ಆಗಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅಂದಿನ ಮುಖ್ಯ ನ್ಯಾ.ದಿನೇಶ್ ಮಹೇಶ್ವರಿ ಅವರಿಗೆ ಪತ್ರ ಬರೆದಿದ್ದರು. ಅದರಂತೆ, ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾ.ಎ.ಎನ್.ವೇಣುಗೋಪಾಲಗೌಡ ಅವರ ಹೆಸರನ್ನು ಸೂಚಿಸಿ 2018ರ ಸೆ.14ರಂದು ಮುಖ್ಯ ನ್ಯಾಯಮೂರ್ತಿಗಳು ಸರಕಾರಕ್ಕೆ ಶಿಫಾರಸು ಮಾಡಿದ್ದರು. ಈ ಮಧ್ಯೆ ಉಪ ಲೋಕಾಯುಕ್ತ ಹುದ್ದೆಗೆ ಸೂಕ್ತ ವ್ಯಕ್ತಿಯ ಹೆಸರು ಸೂಚಿಸುವಂತೆ ನ್ಯಾ.ಎ.ಎಸ್.ಓಕಾ ಅವರಿಗೂ 2019ರ ಜೂ.20ರಂದು ಪತ್ರ ಬರೆದಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈ ಹಿಂದಿನ ಮುಖ್ಯ ನ್ಯಾ.ದಿನೇಶ್ ಮಹೇಶ್ವರಿ ಅವರ ನಿರ್ಧಾರವನ್ನು ಪತ್ರದಲ್ಲಿ ಉಲ್ಲೇಖಿಸಿದ್ದರು.

ಆದರೆ, ನ್ಯಾ.ದಿನೇಶ್ ಮಹೇಶ್ವರಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ 2019ರ ನ.11ರಂದು ನ್ಯಾ.ಎ.ಎಸ್.ಓಕಾ ಅವರಿಗೆ ಪತ್ರ ಬರೆದ ಮುಖ್ಯಮಂತ್ರಿ ಯಡಿಯೂರಪ್ಪನವರು, ವಿಧಾನಪರಿತ್ತಿನ ಸಭಾಪತಿ, ವಿಧಾನಸಭೆಯ ಸ್ಪೀಕರ್ ಹಾಗೂ ಉಭಯ ಸದನಗಳ ಪ್ರತಿಪಕ್ಷದ ನಾಯಕರು ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಗೆ ನ್ಯಾ.ಬಿ.ಎಸ್.ಪಾಟೀಲ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಹಿಂದಿನ ಮುಖ್ಯ ನ್ಯಾಯಮೂರ್ತಿಗಳು ನ್ಯಾ.ಎ.ಎನ್.ವೇಣುಗೋಪಾಲಗೌಡ ಅವರ ಹೆಸರು ಶಿಫಾರಸು ಮಾಡಿದ್ದನ್ನು ಆ ನಾಲ್ವರ ಗಮನಕ್ಕೆ ತರಲಾಯಿತು. ಈ ವಾಸ್ತವ ಸಂಗತಿಗಳನ್ನು ತಮ್ಮ ಗಮನಕ್ಕೆ ತರಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ದಿನೇಶ್ ಮಹೇಶ್ವರಿ ಅವರು ಮಾಡಿದ್ದ ಶಿಫಾರಸನ್ನೇ ನ್ಯಾ.ಓಕಾ ಅವರು ಮಾಡಿ ಪತ್ರ ಬರೆದಿದ್ದರು. ಈ ಮಧ್ಯೆ ನ್ಯಾ.ಬಿ.ಎಸ್.ಪಾಟೀಲ್ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿ 2019ರ ನ.20ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News