ಬಾಬರಿ ಮಸೀದಿ ಧ್ವಂಸ ದಿನ : ಡಿ.6ರಂದು ದ.ಕ. ಜಿಲ್ಲಾದ್ಯಂತ ನಿಷೇಧಾಜ್ಞೆ

Update: 2019-12-05 14:58 GMT

ಮಂಗಳೂರು, ಡಿ. 5: ರಾಮಜನ್ಮ ಭೂಮಿ-ಬಾಬರಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತೀರ್ಪು ಹೊರಬಿದ್ದಿದೆ. ತೀರ್ಪಿನ ಬಗ್ಗೆ ವ್ಯತಿರಿಕ್ತ ಅಭಿಪ್ರಾಯವೂ ವ್ಯಕ್ತವಾಗಿದೆ. ಬಾಬರಿ ಮಸೀದಿ ಧ್ವಂಸ ದಿನ ಪ್ರಯುಕ್ತ ಡಿ.6ರಂದು ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಈ ದಿನ ವಿವಿಧ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಸಂಘಪರಿವಾರ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿವೆ. ದ.ಕ. ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಕದಡುವ ಸಾಧ್ಯತೆ ಇರುವುದರಿಂದ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಕಲಂ 144ರ ಅನ್ವಯ ಡಿ.6ರಂದು ಬೆಳಗ್ಗೆ 6ರಿಂದ ಡಿ.7ರಂದು ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಪಟಾಕಿ ಸಿಡಿಸುವುದು, ಸ್ಫೋಟಕಗಳನ್ನು ಒಯ್ಯುವುದು, ವಿಜಯೋತ್ಸವ, ಸಾರ್ವಜನಿಕ ಮೆರವಣೆಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ಸಾರ್ವಜನಿಕ/ ರಾಜಕೀಯ ಸಭೆ, ಸಮಾರಂಭಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಲಾಗಿದೆ.

ಕಲ್ಲು, ಇತರ ಕ್ಷಿಪಣಿಗಳನ್ನು ಎಸೆಯುವ, ವೇಗದಿಂದ ಒಗೆಯುವ ಸಾಧನಗಳ, ಉಪಕರಣಗಳ ಒಯ್ಯುವಿಕೆ, ಆಕೃತಿ-ಪ್ರತಿಕೃತಿ ಪ್ರದರ್ಶನ, ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡುವ, ರಾಜ್ಯದ ಭದ್ರತೆ ಕುಗ್ಗಿಸುವ, ಅಪರಾಧಕ್ಕೆ ಪ್ರಚೋದಿಸುವ ಬಹಿರಂಗ ಘೋಷಣೆ, ಹಾಡು, ಸಂಗೀತ, ಆವೇಶ ಭಾಷಣ, ಚಿತ್ರ, ಸಂಕೇತ, ಭಿತ್ತಿಪತ್ರ ತಯಾರಿಸುವುದು, ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

ಈ ನಿಷೇಧಾಜ್ಞೆಯು ಮಂಗಳೂರು ನಗರ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ. ಈ ಪ್ರದೇಶದಲ್ಲಿ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ಮಂಗಳೂರಿನಲ್ಲೂ ನಿಷೇಧಾಜ್ಷೆ

ಬಾಬರಿ ಮಸೀದಿ ಧ್ವಂಸ ದಿನ ಪ್ರಯುಕ್ತ ಡಿ.6ರಂದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯು ಅತಿಸೂಕ್ಷ್ಮ ಪ್ರದೇಶವಾಗಿದೆ. ಅಂದು ನಡೆಸಲು ಉದ್ದೇಶಿಸಿರುವ ಕಾರ್ಯಕ್ರಮಗಳಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೊರಡಿಸಲಾಗಿದೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಡಿ.6ರಂದು ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News