ಮೋದಿ, ಅಮಿತ್ ಶಾ ಕಲ್ಪನಾ ಲೋಕದಲ್ಲಿ ಜೀವಿಸುತ್ತಿರುವುದರಿಂದ ದೇಶಕ್ಕೆ ಸಂಕಷ್ಟ: ರಾಹುಲ್ ಗಾಂಧಿ

Update: 2019-12-05 17:22 GMT
Photo:  Twitter/Rahul Gandhi

 ಕೋಝಿಕ್ಕೋಡ್, ಡಿ. 5: ಆರ್ಥಿಕ ನೀತಿ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ತಮ್ಮದೇ ಆದ ಕಲ್ಪನಾ ಲೋಕದಲ್ಲಿ ಜೀವಿಸುತ್ತಿರುವುದರಿಂದ ಹಾಗೂ ಹೊರ ಜಗತ್ತಿನೊಂದಿಗೆ ಸಂಪರ್ಕ ಇಲ್ಲದೇ ಇರುವುದರಿಂದ ದೇಶ ‘ಸಂಕಷ್ಟ’ಕ್ಕೆ ಸಿಲುಕಿದೆ ಎಂದಿದ್ದಾರೆ.

ಉತ್ತರಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಮೂರು ದಿನಗಳ ಭೇಟಿ ಆರಂಭಿಸಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಸೃಷ್ಟಿಸಿದ ಕಲ್ಪನಾ ಲೋಕ ಕುಸಿಯುತ್ತಿರುವುದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇಲ್ಲ ಎಂಬ ಕೇಂದ್ರ ಸರಕಾರದ ಪ್ರತಿಪಾದನೆಗೆ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದರು.

‘‘ನರೇಂದ್ರ ಮೋದಿ ಹಾಗೂ ಅಮಿತ್ ಶಾ ತಮ್ಮದೇ ಆದ ಕಲ್ಪನಾ ಲೋಕದಲ್ಲಿ ಜೀವಿಸುತ್ತಿದ್ದಾರೆ. ಅವರಿಗೆ ಹೊರ ಜಗತ್ತಿನ ಸಂಪರ್ಕವೇ ಇಲ್ಲ. ಅವರು ತಮ್ಮದೇ ಆದ ಜಗತ್ತಿನಲ್ಲಿ ಜೀವಿಸುತ್ತಿದ್ದಾರೆ. ಈ ಕಾರಣಕ್ಕೆ ದೇಶ ಸಂಕಷ್ಟದಲ್ಲಿ ಸಿಲುಕಿದೆ’’ ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜನರ ಮಾತನನ್ನು ಆಲಿಸಿದರೆ, ದೇಶಕ್ಕೆ ಯಾವುದೇ ಸಮಸ್ಯೆ ಉಂಟಾಗದು. ಮೋದಿ ಮಾದರಿ ಆಡಳಿತ ಜನರ ಮನಸ್ಸನ್ನು ವಾಸ್ತವತೆಯಿಂದ ಬೇರೆಡೆ ಸೆಳೆದಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News