ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಸ್‍ಡಿಪಿಐ ಪ್ರತಿಭಟನೆ

Update: 2019-12-19 06:30 GMT

ಮಡಿಕೇರಿ, ಡಿ.7: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಮಾತನಾಡಿ, ಡಿ.9 ರಂದು ಮಂಡನೆಯಾಗಲಿರುವ ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸಲ್ಮಾನರು ಮಾತ್ರವಲ್ಲದೇ ದಲಿತರು ಹಾಗೂ ಆದಿವಾಸಿಗಳು ಕೂಡ ಪರಕೀಯರಾಗುವ ಸಾಧ್ಯತೆ ಇದೆ. ದೇಶದಲ್ಲಿರುವ ಮುಸಲ್ಮಾನರನ್ನು ಪರಕೀಯರನ್ನಾಗಿಸಿ ಭಾರತವನ್ನು ಸಂಪೂರ್ಣವಾಗಿ ಹಿಂದೂ ರಾಷ್ಟ್ರವನ್ನಾಗಿಸುವ ಹುನ್ನಾರ ಕೇಂದ್ರದಿಂದ ನಡೆಯುತ್ತಿದೆ ಎಂದು ಆರೋಪಿಸಿದರು. ಪೌರತ್ವ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸದಂತೆ ಒತ್ತಾಯಿಸಿದ ಅವರು ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. 

ಎಸ್‍ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮೀನ್ ಮೊಹ್ಸಿನ್ ಮಾತನಾಡಿ, ತಲೆತಲಾಂತರಗಳಿಂದ ಭಾರತ ದೇಶದಲ್ಲಿ ನೆಲೆಸಿರುವ ಮುಸಲ್ಮಾನರನ್ನು ಪರಕೀಯರನ್ನಾಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಮುಸಲ್ಮಾನರ ಪೌರತ್ವವನ್ನು ಕಸಿದುಕೊಳ್ಳಲು ಮುಂದಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಭಾರತ ದೇಶದಲ್ಲೇ ಹುಟ್ಟಿ ಬೆಳೆದಿರುವ ಪ್ರಜೆಗಳನ್ನು ಹೊರ ಹಾಕಲು ಸಾಧ್ಯವಿಲ್ಲವೆಂದರು. 

ಪ್ರತಿಭಟನೆಯಲ್ಲಿ ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ಮನ್ಸೂರ್, ಪಿಎಪ್‍ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ, ನಗರಾಧ್ಯಕ್ಷ ಮುಸ್ತಫ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News