ಅಕ್ರಮ ಧಾರ್ಮಿಕ ಕಟ್ಟಡ ತೆರವುಗೊಳಿಸಿ: ಡಿಸಿ ಸಿಂಧೂ ಬಿ. ರೂಪೇಶ್

Update: 2019-12-07 17:09 GMT

ಮಂಗಳೂರು, ಡಿ.7: ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ‘ಉದ್ಯಾನ, ರಸ್ತೆ, ಇನ್ನಿತರೆಡೆ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡದರು.

ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಇಂತಹ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಇಂತಹ 1,579 ಧಾರ್ಮಿಕ ಕಟ್ಟಡಗಳನ್ನು 2009ರಲ್ಲಿ ಗುರುತಿಸಲಾಗಿದ್ದು, ಈ ಪೈಕಿ 345 ಕಟ್ಟಡಗಳನ್ನು ತೆರವು ಗೊಳಿಸಲಾಗಿದೆ. 139 ಕಟ್ಟಡಗಳು ಸಕ್ರಮೀಕರಣಗೊಂಡಿವೆ. 1,095 ಧಾರ್ಮಿಕ ಕಟ್ಟಡಗಳು ಬಾಕಿ ಇವೆ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮಾತನಾಡಿ, ಪ್ರತಿಯೊಂದು ಪ್ರಕರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ವಿವಿಧ ತಾಲೂಕು ತಹಶೀಲ್ದಾರರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News