ಮುಂದಿನ ದಿನಗಳಲ್ಲಿ ಬೆಂಗಳೂರಿನ ಚಿತ್ರಣವನ್ನೇ ಬದಲಿಸುತ್ತೇನೆ: ಬಿ.ಎಸ್.ಯಡಿಯೂರಪ್ಪ

Update: 2019-12-08 13:54 GMT

ಬೆಂಗಳೂರು, ಡಿ.8: ರಾಜ್ಯದ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕೆಂಬುದು ನನ್ನ ಗುರಿಯಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಾದರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರವಿವಾರ ನಗರದ ಯಲಹಂಕ ಉಪನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ 400 ಕೋಟಿ ರೂ.ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಬೆಂಗಳೂರಿನ ಚಿತ್ರಣವನ್ನೇ ಬದಲಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ, ಬಿಬಿಎಂಎ ಸ್ಥಾಪಿಸಿ ಸಂಯೋಜಿತ ಸಂಚಾರ ನಿರ್ವಹಣೆಗೆ 12 ಕಾರಿಡಾರ್ ರಸ್ತೆ ಗುರುತಿಸಲಾಗುವುದು. ಅದರಲ್ಲಿ ಪ್ರತ್ಯೇಕ ಸೈಕಲ್, ಬಸ್ ಪಥ ನಿರ್ಮಾಣ ಮಾಡಿ, ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು ಎಂದು ಹೇಳಿದರು.

ಮೆಟ್ರೋ ಎರಡನೆ ಹಂತ 2021ರ ಅಕ್ಟೋಬರ್ ಅಥವಾ ಡಿಸೆಂಬರ್ ವೇಳೆ ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ. ಹೊರ ವರ್ತುಲ ರಸ್ತೆ, ಏರ್‌ಪೋರ್ಟ್ ವರೆಗಿನ ಮೆಟ್ರೋ ಯೋಜನೆಯನ್ನು 2023ರೊಳಗೆ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ಮೆಟ್ರೋ ಮೂರನೇ ಹಂತ ಹೊಸಕೋಟೆ ವರೆಗೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ವೈಜ್ಞಾನಿಕ ಕಸ ನಿರ್ವಹಣೆ, ಕೆಂಪೇಗೌಡ ಪುತ್ಥಳಿ, ಕೆಂಪೇಗೌಡ ಅಧ್ಯಯನ ಕೇಂದ್ರ ಸೇರಿದಂತೆ ಇತಿಹಾಸದಲ್ಲಿ ಉಳಿಯುವಂತಹ ಯೋಜನೆಗಳನ್ನು ರೂಪಿಸಲಾಗುವುದು ಎಂದು ನುಡಿದರು.

ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಅಂಬೇಡ್ಕರ್ ಹೆಸರು ಹೇಳಿಕೊಂಡು ಕೆಲವು ಪಕ್ಷಗಳು ಅಧಿಕಾರಕ್ಕೆ ಬಂದ ನಂತರ ಅವರ ಆದರ್ಶಗಳಿಗೆ ಬೆಲೆ ನೀಡಲಿಲ್ಲ. ಜನ ಸಾಮಾನ್ಯರ ಮಟ್ಟಕ್ಕೆ ಅಂಬೇಡ್ಕರ್‌ರ ವಿಚಾರಗಳನ್ನು ಇಂದಿನ ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಲುಪಿಸುತ್ತಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎಸ್.ಆರ್.ವಿಶ್ವನಾಥ್, ಮೇಯರ್ ಗೌತಮ್ ಕುಮಾರ್ ಜೈನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವರಿದ್ದರು.

‘ನಮ್ಮ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಎಸ್ಸಿ, ಎಸ್ಟಿ ಸಮುದಾಯದ ಕಲ್ಯಾಣಕ್ಕಾಗಿ ಸಭೆ ನಡೆಸಿ, ಕ್ರಿಯಾ ಯೋಜನೆ ರೂಪಿಸಿ ಅನುಮೋದನೆ ನೀಡಲಾಗಿದೆ. ಈ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ಬದ್ಧವಾಗಿದೆ’

-ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News