ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್‌ಕೌಂಟರ್ ತನಿಖೆಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇಮಕ ಸಾಧ್ಯತೆ

Update: 2019-12-11 15:08 GMT

ಹೊಸದಿಲ್ಲಿ, ಡಿ. 11: ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿರುವ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಯ ನಿಯೋಜನೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ‘‘ತೆಲಂಗಾಣ ಉಚ್ಚ ನ್ಯಾಯಾಲಯ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂಬ ಬಗ್ಗೆ ನಮಗೆ ಅರಿವಿದೆ’’ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠ, ಈ ಪ್ರಕರಣವನ್ನು ದಿಲ್ಲಿ ಮೂಲದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ತನಿಖೆ ನಡೆಸಲು ನಾವು ಬಯಸುತ್ತೇವೆ ಎಂದರು.

‘‘ಈ ಪ್ರಕರಣದ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ನಿಯೋಜಿಸುವಂತೆ ನಾವು ಸಲಹೆ ನೀಡಿದ್ದೇವೆ’’ ಎಂದು ಎಸ್.ಎ. ನಝೀರ್ ಹಾಗೂ ಸಂಜೀವ್ ಖನ್ನಾ ಅವರನ್ನು ಕೂಡ ಒಳಗೊಂಡ ಪೀಠ ಹೇಳಿದೆ. ಈ ಪ್ರಕರಣದ ತನಿಖೆ ನಡೆಸುವ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ದಿಲ್ಲಿಯಲ್ಲಿ ಇರಬೇಕು ಎಂದು ಪೀಠ ಸ್ಪಷ್ಟಪಡಿಸಿದೆ. ಎನ್‌ಕೌಂಟರ್ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಿತು ಹಾಗೂ ಗುರುವಾರಕ್ಕೆ ಮುಂದೂಡಿತು. ತೆಲಂಗಾಣ ಸರಕಾರದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಹಾಗೂ ಕೃಷ್ಣಕುಮಾರ್ ಸಿಂಗ್, ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡುವ ನಿರ್ದೇಶವನ್ನು ಸರಕಾರ ಪಾಲಿಸಲಿದೆ. ಅಲ್ಲದೆ ಈ ಪ್ರಕರಣವನ್ನು ಈಗಾಗಲೇ ರಾಜ್ಯ ಸಿಐಡಿಗೆ ಶಿಫಾರಸು ಮಾಡಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News