15 ದಿನಗಳಲ್ಲಿ ತೆರವಿಗೆ ಕ್ರಮ ಕೈಗೊಳ್ಳಿ: ಕಲಬುರಗಿ ಡಿಸಿಗೆ ಹೈಕೋರ್ಟ್ ಆದೇಶ

Update: 2019-12-11 18:03 GMT

ಬೆಂಗಳೂರು, ಡಿ.11: ಘೋಷಿತ ಸ್ಮಾರಕವಾಗಿರುವ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿನ ಅನಧಿಕೃತ ಕಟ್ಟಡಗಳ ತೆರವಿಗೆ 15 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕೆಂದು ಕಲಬುರ್ಗಿ ಜಿಲ್ಲಾಧಿಕಾರಿಗೆ ಹೈಕೋರ್ಟ್ ಆದೇಶಿಸಿದೆ. 

ಈ ಕುರಿತು ಸಾಮಾಜಿಕ ಕಾರ್ಯಕರ್ತ ಶರಣ್ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ರವಿ ಮಳಿಮಠ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಕೇಂದ್ರ ಸರಕಾರದ ಪರ ವಾದಿಸಿದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್ ಅವರು, ಒತ್ತುವರಿ ತೆರವುಗೊಳಿಸಲು ಸರ್ವೇಕ್ಷಣಾ ಮತ್ತು ಪುರಾತತ್ವ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನೋಟಿಸ್ ಅನ್ವಯ ಹದಿನೈದು ದಿನಗಳಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು. ಆದರೆ, ಇನ್ನೂ ತೆರವುಗೊಳಿಸಿಲ್ಲ ಎಂದು ವಿವರಿಸಿದರು. ಇದಕ್ಕೆ ನ್ಯಾಯಪೀಠವು, ತೆರವು ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು. 

ಏನಿದು ಆಕ್ಷೇಪಣೆ: ಮಾಹಿತಿ ಹಕ್ಕು ಕಾಯ್ದೆ ಅಡಿ 2011ರಲ್ಲಿ ಪಡೆದುಕೊಂಡಿರುವ ಮಾಹಿತಿಯಂತೆ ಕಲಬುರ್ಗಿ ಕೋಟೆಯ ಒಳಗೆ ಮತ್ತು ಹೊರಗೆ 194 ಕುಟುಂಬಗಳು ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನೆಲೆಸಿವೆ. ಈ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆ ಅಥವಾ ಸ್ಥಳೀಯ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಅರ್ಜಿದಾರರ ಆಕ್ಷೇಪ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News