ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ

Update: 2019-12-12 12:28 GMT

ಬೆಂಗಳೂರು, ಡಿ. 12: ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್ ಮತ್ತು ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವ ಸಂಬಂಧ ವರಿಷ್ಠರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರು ತೀರ್ಮಾನ ಮಾಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಂಟಿಬಿ ನಾಗರಾಜ್ ಮತ್ತು ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನೂತನ ಶಾಸಕರು ಒತ್ತಡ ಹೇರಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಉಪಚುನಾವಣೆಯಲ್ಲಿ ಆಯ್ಕೆಯಾಗಿರುವ 11 ಮಂದಿ ‘ಅರ್ಹ’ ಶಾಸಕರಿಗೂ ಸಚಿವ ಸ್ಥಾನ ನೀಡುವುದು ನಿಶ್ಚಿತ. ರಾಯಚೂರಿನ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಬಳಿಕ ಆ ಇಬ್ಬರು ಮತ್ತು ಆರ್.ಶಂಕರ್ ಅವರಿಗೆ ಸ್ಥಾನ ನೀಡಬೇಕು. ಉಳಿದ ಒಂದೆರಡು ಸ್ಥಾನವನ್ನು ಪಕ್ಷದ ಹಿರಿಯರಿಗೆ ನೀಡಬೇಕು ಎಂದು ತಿಳಿಸಿದರು.

ಮೂಲ ಮತ್ತು ವಲಸಿಗರೆಂಬ ಭಿನ್ನಮತ ಬಿಜೆಪಿಯಲ್ಲಿ ಇಲ್ಲ. 17 ಮಂದಿ ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಅವರು ಮಾಡಿದ ತ್ಯಾಗದ ಋಣವನ್ನು ತೀರಿಸಲೇಬೇಕೆಂಬುದು ಪಕ್ಷದ ಎಲ್ಲರಿಗೂ ಗೊತ್ತಿದೆ ಎಂದು ಅವರು ಸ್ಪಷ್ಟನೆ ನೀಡಿದರು.

‘ನಾನು ಉಪಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ. ಈಗಿನ ಪರಿಸ್ಥಿತಿಯಲ್ಲಿ ಕೊಡಿ ಎಂದು ಕೇಳುವುದಕ್ಕೂ ಹೋಗುವುದಿಲ್ಲ. ರಾಜ್ಯ ಸರಕಾರ ಮುಂದುವರಿಯಲು ಪೂರ್ಣ ಸಹಕಾರ ಕೊಡಬೇಕು’

-ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News