ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ, ರಾಗಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನ

Update: 2019-12-12 12:42 GMT

ಬೆಂಗಳೂರು, ಡಿ. 12: 2019-20ನೆ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ಭತ್ತ ಸಾಮಾನ್ಯ 1,815 ರೂ., ‘ಎ’ ಗ್ರೇಡ್-1,835ರೂ., ಬಿಳಿಜೋಳ ಹೈಬ್ರೀಡ್/ಮಾಲ್ದಂಡಿ-2,550 ರೂ./2,570 ರೂ. ಹಾಗೂ ರಾಗಿ-3,150 ರೂ. ಕನಿಷ್ಟ ಬೆಂಬಲ ಬೆಲೆಗೆ ಖರೀದಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, 1.75 ಲಕ್ಷ ಮೆಟ್ರಿಕ್ ಟನ್ ಭತ್ತ, 2 ಲಕ್ಷ ಮೆಟ್ರಿಕ್ ಟನ್ ರಾಗಿ ಮತ್ತು 1,241 ಮೆಟ್ರಿಕ್ ಟನ್ ಬಿಳಿಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ರೈತರಿಂದ 10 ಕ್ವಿಂಟಾಲ್ ಭತ್ತ, 75 ಕ್ವಿಂಟಾಲ್ ರಾಗಿ, 75 ಕ್ವಿಂಟಾಲ್ ಜೋಳವನ್ನು ಖರೀದಿಸಲಾಗುವುದು, ಭತ್ತ, ರಾಗಿ ಮತ್ತು ಬಿಳಿಜೋಳವನ್ನು 2020ರ ಜನವರಿ 1ರಿಂದ ಮಾರ್ಚ್ 30ರ ವರೆಗೆ ಖರೀದಿಸುವ ಅವಧಿ ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭತ್ತವನ್ನು ಸಂಬಂಧಿಸಿದ ಆಯಾ ಜಿಲ್ಲೆಗಳಿಂದ ಅಕ್ಕಿಯನ್ನಾಗಿ ಪರಿವರ್ತಿಸಲು ಜಿಲ್ಲಾಧಿಕಾರಿಗಳಿಂದ ಆಯ್ಕೆ ಮಾಡಿ ಗುರುತಿಸಿದ ಅಕ್ಕಿ ಗಿರಿಣಿಗೆ FRUIT  ತಂತ್ರಾಂಶದ ಗುರುತಿನೊಂದಿಗೆ ಉತ್ಪನ್ನವನ್ನು ಒದಗಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯನ್ನು ರಚಿಸಿ, ಈ ಸಮಿತಿ ಮೂಲಕ ಸ್ಥಳೀಯ ಅಗತ್ಯತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳ ಸ್ಥಾಪನೆ ಹಾಗೂ ಇನ್ನಿತರ ಸಿಬ್ಬಂದಿಗಳ ನಿಯೋಜನೆಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದ್ದಾರೆ.

ಕೇಂದ್ರಕ್ಕೆ ಪ್ರಸ್ತಾವನೆ: ಶೇಂಗಾ ಹಾಗೂ ತೊಗರಿ ಬೆಳೆ ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರಕಾರಕ್ಕೆಸ ಪ್ರಸ್ತಾವನೆ ಸಲ್ಲಿಸಲು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಫೆಡರೇಷನ್ ಮೂಲಕ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಉಪ ಸಮಿತಿ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಪಶುಸಂಗೋಪನಾ ಸಚಿವ ಪ್ರಭು ಚೌವಾಣ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News