ಜಾಗೃತಿಯಿಂದ ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯದಿಂದ ರಕ್ಷಣೆ: ನೀತಾ ಪೂಜಾರಿ

Update: 2019-12-12 13:53 GMT

ಉಡುಪಿ, ಡಿ.12: ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಗ್ರಾಪಂ ಹಾಗೂ ಶಾಲಾಕಾಲೇಜು ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳು ಹಾಗೂ ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳಿಂದ ತಮ್ಮನ್ನು ತಾವೇ ರಕ್ಷಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಉಡುಪಿ ತಾಪಂ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಮಕ್ಕಳಿಗೆ ಸಂಬಂಧಪಟ್ಟ ಕಾಯ್ದೆಗಳು ಮತ್ತು ವಿವಿಧ ಸೇವೆಗಳ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಮಾತನಾಡುತ್ತಿದ್ದರು.

ತಳಮಟ್ಟದಿಂದಲೇ ಜನರಿಗೆ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಕಿರುಕುಳ ಹಾಗೂ ದೌರ್ಜನ್ಯಗಳನ್ನು ತಡೆಯುವ ಕುರಿತ ಮಾಹಿತಿ ಹಾಗೂ ಕಾನೂನಿನ ಅರಿವು ಮೂಡಿಸುವುದು ಅಗತ್ಯ ಇದೆ. ಸಮಾಜದಲ್ಲಿ ಧೈರ್ಯ ದಿಂದ ಬದುಕಿ ಉನ್ನತ ಶ್ರೇಣಿಗೆ ಏರುವಂತಾಗಬೇಕು ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮಾತನಾಡಿ, ಮಕ್ಕಳ ರಕ್ಷಣೆ, ಸಂರಕ್ಷಣೆ ಮತ್ತು ಪೋಷಣೆ ದೊಡ್ಡವರ ಕರ್ತವ್ಯವಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ನಡೆದ ಸಂದರ್ಭ ಸರಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ನಿರ್ಲಕ್ಷ್ಯ ಮಾಡದೆ ಕರ್ತವ್ಯ ಹಾಗೂ ಮಾನವೀಯತೆ ನೆಲೆ ಯಲ್ಲಿ ಮಕ್ಕಳ ರಕ್ಷಣೆಗೆ ಮುಂದೆ ಬರಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098ನ್ನು ಸಂಪರ್ಕಿಸಬಹುದು. ಮಕ್ಕಳನ್ನು ಬೆಳೆಸುವ ವಿಧಾನದಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಅಖಿಲ್ ಹೆಗ್ಡೆ ಮಾತನಾಡಿ, ಮಕ್ಕಳಿಗೆ ಕೊಲೆ, ಕಳ್ಳತನ, ಮಾಧಕ ವಸುತಿಗಳ ಸೇವನೆ ಹಾಗೂ ಮಾರಾಟಗಳ ಜೊತೆಗೆ ಲೈಂಗಿಕ ಕಿರುಕುಳ, ದೌರ್ಜನ್ಯಗಳೂ ಕೂಡ ಅಪರಾಧ ಎನ್ನುವುದನ್ನು ತಿಳಿಸಿ ಹೇಳಬೇಕು. ಚಿಕ್ಕ ಪ್ರಾಯದಲ್ಲಿಯೇ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಮಕ್ಕಳಿಗೆ ದೊಡ್ಡವರಂತೆ ಎಲ್ಲಾ ಹಕ್ಕುಗಳಿವೆ ಎನ್ನುವುದನ್ನು ನಾವೆಲ್ಲಾ ಮರೆಯಬಾರದು, ಅವರ ಸ್ವಾತಂತ್ರ್ಯ, ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳ ರೋಟರಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ.ಸತೀಶ್, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.

ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾನೂನು ಪರಿ ವೀಕ್ಷಣಾಧಿಕಾರಿ ಪ್ರಭಾರಕ್ ಆಚಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ದರು. ಗ್ಲೀಷಾ ಮೊಂತೆರೋ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News