ಡಿ.14ರಂದು ರಾಷ್ಟ್ರೀಯ ಲೋಕ್ ಅದಾಲತ್

Update: 2019-12-12 14:05 GMT

ಉಡುಪಿ, ಡಿ.12: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದಂತೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದು. ರಾಜೀಯಾಗಬಲ್ಲ ಅಪರಾಧಿಕ, ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ ಕಂದಾಯ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದು.

ನ್ಯಾಯಾಲಯಗಳಲ್ಲಿ ಉಭಯಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣ ಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆ ಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News