ಜ.20 ರಿಂದ ವಿಧಾನಮಂಡಲ ಜಂಟಿ ಅಧಿವೇಶನ: ಸಚಿವ ಮಾಧುಸ್ವಾಮಿ

Update: 2019-12-12 15:48 GMT

ಬೆಂಗಳೂರು, ಡಿ.12: ಮುಂದಿನ ಸಾಲಿನ ಜ.20 ರಿಂದ 30ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಕರೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜ.20ರಂದು ರಾಜ್ಯಪಾಲರು ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದರು.

ಆರ್ಯವೈಶ್ಯ ಸಮಾಜಕ್ಕೆ ನಿಗಮ, ಮಂಡಳಿಗಳಿಂದ ಸಾಲ ಪಡೆದುಕೊಳ್ಳಲು ಅನುಕೂಲವಾಗುವಂತೆ ಸೀಮಿತಗೊಳಿಸಿ ಜಾತಿ ಪ್ರಮಾಣ ಪತ್ರ ನೀಡಲು ನಿರ್ಧರಿಸಲಾಗಿದೆ. ಆದರೆ, ಈ ಸಮಾಜಕ್ಕೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಹಿಂದುಳಿದ ವರ್ಗಗಳ ಆಯೋಗವು ಆದಷ್ಟು ಶೀಘ್ರವಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸರಕಾರಿ ವೈದ್ಯಕೀಯ ಕಾಲೇಜಿನ ಕಟ್ಟಡ ನಿರ್ಮಾಣ, ಮೂಲಭೂತ ಸೌಕರ್ಯಗಳು ಹಾಗೂ ಇನ್ನಿತರ ಕಾಮಗಾರಿಗಳಿಗಾಗಿ 525 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ಹೇಳಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಐಟಿಐ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಸುಮಾರು 5331 ಲ್ಯಾಪ್‌ಟಾಪ್‌ಗಳನ್ನು ಖರೀದಿಸಲು 16.98 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಎಸ್ಸಿ-ಎಸ್ಟಿಗೆ ಸಂಬಂಧಿಸಿದಂತೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಲು ನಿರ್ಧರಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲಿನಲ್ಲಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಲು ಮಲಪ್ರಭಾ ನದಿ ದಂಡೆ ಮೇಲೆ 25 ಎಕರೆ ಪ್ರದೇಶದಲ್ಲಿ 129.25 ಕೋಟಿ ರೂ.ವೆಚ್ಚದಲ್ಲಿ ‘ಟೂರಿಸಂ ಪ್ಲಾಝಾ’ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅನುಮೋದಿತ ಬಡಾವಣೆಗಳಲ್ಲಿ ಸುಮಾರು 75 ಸಾವಿರ ಅಕ್ರಮ ಕಟ್ಟಡಗಳು ಇರುವ ಬಗ್ಗೆ ಸರಕಾರಕ್ಕೆ ಮಾಹಿತಿ ಬಂದಿದೆ. ಈ ಅಕ್ರಮ ಕಟ್ಟಡಗಳಿಗೆ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಲು ಚಿಂತನೆ ನಡೆದಿದ್ದು, ಈ ಬಗ್ಗೆ ವರದಿ ನೀಡುವಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಸಮವಸ್ತ್ರದ ಸೀರೆಗಳನ್ನು ವಿತರಿಸಲು 10.27 ಕೋಟಿ ರೂ.ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ದೈಹಿಕ ವಿಕಲಚೇತನರಿಗೆ ಯಾಂತ್ರೀಕೃತ ದ್ವಿಚಕ್ರ ವಾಹನಗಳನ್ನು ವಿತರಿಸಲು 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಭಾಗ್ಯಲಕ್ಷ್ಮಿ ಯೋಜನೆಗಾಗಿ ಎಲ್‌ಐಸಿಯನ್ನು ಮುಂದಿನ ಸಾಲಿನ ಮಾರ್ಚ್ 31ರವೆರೆಗೆ ಪಾಲುದಾರ ಅಂಗಸಂಸ್ಥೆಯನ್ನಾಗಿ ಮುಂದುವರೆಸಲು ನಿರ್ಧರಿಸಲಾಗಿದೆ. ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಕೋಲಾರ, ಚಾಮರಾಜನಗರ, ಕಲಬುರ್ಗಿ, ಹಾಸನ, ಧಾರವಾಡದಲ್ಲಿ ಮಹಿಳಾ ಕ್ರೀಡಾಪಟುಗಳಿಗಾಗಿ ಪ್ರತ್ಯೇಕ ವಸತಿ ನಿಲಯಗಳನ್ನು ನಿರ್ಮಿಸಲು 15 ಕೋಟಿ ರೂ.ಬಿಡುಗಡೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಬಿಡಿಎ ಫೆರಿಫೆರಲ್ ರಿಂಗ್ ರಸ್ತೆಯನ್ನು ಮೂರು ಹಂತಗಳಲ್ಲಿ ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ 1746 ಕೋಟಿ ರೂ., ಬಳ್ಳಾರಿ ರಸ್ತೆಯಿಂದ ಹಳೆ ಮದ್ರಾಸ್ ರಸ್ತೆ 1417.37 ಕೋಟಿ ರೂ., ಹಳೆ ಮದ್ರಾಸ್ ರಸ್ತೆಯಿಂದ ಹೊಸೂರು ರಸ್ತೆ 2453 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ ಎಂದು ಮಾಧುಸ್ವಾಮಿ ಹೇಳಿದರು.

65 ಕಿ.ಮೀ ವಿಸ್ತೀರ್ಣದ ಈ ರಸ್ತೆಗಾಗಿ 67 ಗ್ರಾಮಗಳ 1810 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಯೋಜನೆಗಾಗಿ ರಾಜ್ಯ ಸರಕಾರದ ಪಾಲು ಶೇ.16ರಷ್ಟು(901.72 ಕೋಟಿ ರೂ.) ನೀಡಲು ನಿರ್ಧರಿಸಲಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಜೈಕಾ ಜೊತೆ ಹಣಕಾಸು ಒಪ್ಪಂದ ಕುರಿತು ಚರ್ಚಿಸಲು ಬಿಡಿಎಗೆ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ವಿಜಯಪುರ ಜಿಲ್ಲೆಯ ತಿಕೋಟಾ ಗ್ರಾಮ ಪಂಚಾಯತ್ ಹಾಗೂ ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮ ಪಂಚಾಯತ್ ನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ನಂದಿಬೆಟ್ಟದಲ್ಲಿ ಉಗಮವಾಗುವ ದಕ್ಷಿಣ ಪಿನಾಕಿನಿ ನದಿಯನ್ನು 2600 ಕೋಟಿ ರೂ.ಅಂದಾಜು ವೆಚ್ಚದಲ್ಲಿ ಖಾಸಗಿ ಸಂಸ್ಥೆಗಳ ಉದ್ಯಮಿಗಳು ‘ದಕ್ಷಿಣ ಪಿನಾಕಿನಿ ನದಿ ಪುನರುಜ್ಜೀವನ ಟ್ರಸ್ಟ್’ ಅಡಿಯಲ್ಲಿ ಅಭಿವೃದ್ಧಿಗೊಳಿಸಲು ಮುಂದೆ ಬಂದಿದ್ದಾರೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮುಳ್ಳಿಕಾವು ಬಳಿ ನೆವಿಯಾ ಹೊಳೆಗೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ 14.97 ಕೋಟಿ ರೂ.ಮೊತ್ತದ ಅನುದಾನ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

-ಜೆ.ಸಿ.ಮಾಧುಸ್ವಾಮಿ, ಕಾನೂನು ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News