ಪುತ್ತೂರು ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು

Update: 2019-12-12 15:52 GMT

ಬೆಂಗಳೂರು, ಡಿ.12: ಮಂಗಳೂರಿನ ಪುತ್ತೂರಿನ ಬೆಳ್ಳಿಪ್ಪಾಡಿ ಕಠಾರದ ನಿರ್ಜನ ಪ್ರದೇಶದಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಆರೋಪಿಗಳಾದ ಗುರುನಂದನ್, ಕಿಶನ್, ಸುನೀಲ್ ಹಾಗೂ ಪ್ರಖ್ಯಾತ್‌ಗೆ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಆರೋಪಿಗಳು ತಮ್ಮ ಸಹ ವಿದ್ಯಾರ್ಥಿನಿಯನ್ನು ಮನೆಗೆ ತಲುಪಿಸುವುದಾಗಿ ನಂಬಿಸಿ, ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ಮಾರ್ಗ ಮಧ್ಯೆ ದಾರಿ ಬದಲಿಸಿ ಬೆಳ್ಳಿಪ್ಪಾಡಿಯ ಕಠಾರ ಎಂಬಲ್ಲಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಅಲ್ಲಿ ಸಾಮೂಹಿಕ ಅತ್ಯಾಚಾರವನ್ನು ಎಸಗಿದ್ದರು ಎಂದು ಆರೋಪಿಸಲಾಗಿತ್ತು.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು. ಈ ಬಳಿಕ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿದ್ದರು. ಈ ಬಳಿಕ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಈ ಆರೋಪಿಗಳು ಅಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಹೀಗಾಗಿ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಹೈಕೋರ್ಟ್ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News