ಜ.1ರಿಂದ ನೊಂದಣಿಯಾಗದ ಪಿಜಿಗಳು ಬಂದ್: ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ

Update: 2019-12-12 16:03 GMT

ಉಡುಪಿ, ಡಿ.12: ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಿಜಿಗಳು ಕಡ್ಡಾಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಡಿ.31 ರೊಳಗೆ ನೊಂದಣಿ ಮಾಡಬೇಕು. ಇಲ್ಲವಾದಲ್ಲಿ ಜ.1ರಿಂದ ಅಂತಹ ಪಿಜಿ ಗಳನ್ನು ಬಂದ್ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಈ ಮೊದಲು ಪಿಜಿಗಳ ನೊಂದಾವಣೆಗಾಗಿ ಪತ್ರಿಕಾ ಪ್ರಕಟಣೆ ನೀಡಿದ್ದು, ಆ ಸಂದರ್ಭದಲ್ಲಿ ಕೇವಲ 8 ಸಂಸ್ಥೆಗಳು ಮಾತ್ರ ನೊಂದಣಿಗಾಗಿ ಅರ್ಜಿ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಹಲವು ಅನಧಿಕೃತ ಪಿಜಿಗಳು ಕಾರ್ಯ ನಿರ್ವಹಿಸು ತ್ತಿದ್ದವು. ವಿದ್ಯಾಭ್ಯಾಸ ನಿರತ ಮತ್ತು ಉದ್ಯೋಗಸ್ಥ ಮಹಿಳೆಯರು ವಾಸಿಸಲು ಅನುಮ ಮಾಡಿಕೊಟ್ಟಿರುವ ಪಿಜಿಗಳು ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಪಿಜಿ ಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ನೋಂದಣಿಯಾಗಬೇಕು ಎಂದರು.

ನೋಂದಣಿಯಾದ ಪಿಜಿಗಳ ವಿವರಗಳನ್ನು ಜಿಲ್ಲೆಯ ಆರಕ್ಷಕ ಠಾಣೆಗೆ ರವಾನಿಸಿ, ಠಾಣೆಯಿಂದ ಪ್ರಮಾಣ ಪತ್ರ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಪಿ.ಜಿಗಳಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಮಹಿಳೆಯರಿಗೆ ಅಗತ್ಯ ಸುರಕ್ಷಾ ಕ್ರಮಗಳನ್ನು ಮತ್ತು ಎಲ್ಲ ರೀತಿಯ ಸೂಕ್ತ ಸೌಲಭ್ಯ ಗಳನ್ನು ಒದಗಿಸಬೇಕು ಎಂದು ಪಿಜಿಗಳ ಮುಖ್ಯಸ್ಥರಿಗೆ ಸೂಚಿಸಿದರು.

ಕಟಪಾಡಿಯಲ್ಲಿ ಮಹಿಳಾ ಮಂಡಳಿಯಿಂದ ನೂತನವಾಗಿ ನಿರ್ಮಿಸಲಾಗುವ ವಸತಿಗೃಹದ ನಿರ್ಮಾಣ ಕಾರ್ಯಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಬಗ್ಗೆ ಹಾಗೂ ಮಣಿಪಾಲದಲ್ಲಿನ ಉದ್ಯೋಗಸ್ಥ ಮಹಿಳೆಯರ ವಸತಿಗೃಹದ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಾ ಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News