ಆನ್ ಲೈನ್ ಮೂಲಕ ಮಾದಕವಸ್ತುಗಳ ಸರಬರಾಜು: ತನಿಖೆಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

Update: 2019-12-12 16:05 GMT

ಉಡುಪಿ, ಡಿ.12: ಜಿಲ್ಲೆಯಲ್ಲಿ ಮಾದಕ ವಸ್ತುಗಳಿಗೆ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳಲ್ಲಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಮಾದಕ ವಸ್ತು ಸೇವನೆ ನಿಷೇಧ ಕಾಯಿದೆ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಈವರೆಗೆ 240ಕ್ಕೂ ಹೆಚ್ಚು ಮಂದಿಯನ್ನು ಮಾದಕ ವಸ್ತು ಪೂರೈಕೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಇವರೆಲ್ಲರ ಗುರಿ ಕಾಲೇಜು ವಿದ್ಯಾರ್ಥಿಗಳೇ ಆಗಿದ್ದಾರೆ ಎಂದು ಉಡುಪಿ ಡಿವೈಎಸ್ಪಿ ಜೈಶಂಕರ್ ಸಭೆಗೆ ಮಾಹಿತಿ ನೀಡಿದರು.

ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಹಾಗೂ ಬೇರೆ ಬೇರೆ ಹೆಸರಲ್ಲಿ ಕೂಡ ಮಾದಕ ವಸ್ತುಗಳು ಸರಬರಾಜಾಗುತ್ತಿದ್ದು, ಜಿಲ್ಲೆಯಲ್ಲಿ ಗಾಂಜಾ ಸೇವನೆ ಪ್ರಮಾಣ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಆನ್‌ಲೈನ್ ಮೂಲಕ ಮಾದಕ ವಸ್ತು ಸರಬರಾಜಾಗುತ್ತಿರುವ ಕುರಿತು ಪೊಲೀಸ್ ಇಲಾಖೆಯ ಮೂಲಕ ತನಿಖೆ ನಡೆಸುವಂತೆ ಸೂಚಿಸಿದ ಜಿಲ್ಲಾಧಿ ಕಾರಿ, ಮಾದಕ ವಸ್ತು ಸೇವನೆ ನಿಷೇಧಿಸಲು ಎಲ್ಲಾ ಇಲಾಖೆಗಳು ಸಮನ್ವಯ ದಿಂದ ಕಾರ್ಯ ನಿರ್ವಹಿಸಿ, ಯುವ ಜನತೆ ಇದಕ್ಕೆ ಬಲಿಯಾಗದಂತೆ ತಡೆಯಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಾ ಬಾಯಿ, ಜಿಪಂ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News