ವಾಹನಗಳ ಅನಧಿಕೃತ ನಂಬರ್ ಪ್ಲೇಟ್ ತೆಗೆದು ಹಾಕಲು ಹೈಕೋರ್ಟ್ ನಿರ್ದೇಶನ

Update: 2019-12-13 18:31 GMT

ಬೆಂಗಳೂರು, ಡಿ.13: ರಾಜ್ಯ ಸರಕಾರ, ಪೊಲೀಸ್ ಮತ್ತು ವಿವಿಧ ಸರಕಾರಿ ಸಂಸ್ಥೆಗಳ ಹೆಸರುಗಳನ್ನು ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಬಳಸುತ್ತಿದ್ದಾರೆ ಹಾಗೂ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅಂತಹ ನಂಬರ್ ಪ್ಲೇಟ್‌ಗಳನ್ನು ತೆಗೆದು ಹಾಕಲು ಕ್ರಮ ಕೈಗೊಳ್ಳಬೇಕು ಹಾಗೂ ಮಾಧ್ಯಮಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಮಾನಹ ಹಕ್ಕುಗಳ ಆಯೋಗದ ಹೆಸರುಗಳ ದುರುಪಯೋಗದ ವಿರುದ್ಧ ಸ್ಥಳೀಯ ಪೊಲೀಸರು ದಾಖಲಿಸಿದ್ದ ಪ್ರಕರಣ ಪ್ರಶ್ನಿಸಿ ಮಂಗಳೂರಿನ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ.

ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಇಂತಹ ಹೆಸರುಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹೀಗಾಗಿ, ಅನಧಿಕೃತವಾಗಿ ವಾಹನಗಳ ಮೇಲೆ ಹಾಕಿರುವ ಹೆಸರುಗಳನ್ನು ತೆಗೆದು ಹಾಕುವಂತೆ ಸರಕಾರಕ್ಕೆ ನಿರ್ದೇಶಿಸಿದೆ. ಅಲ್ಲದೆ, ಮಾಧ್ಯಮಗಳಲ್ಲಿ ಸಾರ್ವಜನಿಕ ನೋಟಿಸ್ ನೀಡುವಂತೆ ನ್ಯಾಯಪೀಠವು ನಿರ್ದೇಶನ ನೀಡಿ, ಅರ್ಜಿ ವಿಚಾರಣೆಯನ್ನು ಡಿ.18ಕ್ಕೆ ಮುಂದೂಡಿದೆ.

ಪ್ರಕರಣವೇನು: ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಅರ್ಜಿದಾರ ಶೆಟ್ಟಿ ಎಂಬುವವರು ರಾಷ್ಟ್ರೀಯ ಮಾನವ ಹಕ್ಕುಗಳ ಮಂಡಳಿ ಎಂಬ ಹೆಸರನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಮಾನವ ಹಕ್ಕುಗಳ ಆಯೋಗ ಅಥವಾ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಅಥವಾ ರಾಜ್ಯ ಮಾನವ ಹಕ್ಕುಗಳ ಆಯೋಗ ಎಂಬ ಅಭಿಪ್ರಾಯವನ್ನು ನೀಡುತ್ತದೆ. ಅಲ್ಲದೆ, ಇದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಹೆಸರನ್ನು ದುರುಪಯೋಗಪಡಿಸಿಕೊಂಡತಾಗುತ್ತದೆ. ಹೀಗಾಗಿ, ಮಂಗಳೂರು ಉತ್ತರ ಪೊಲೀಸರು ಲಾಂಛನ ಗಳು ಮತ್ತು ಹೆಸರು ಕಾಯ್ದೆಯಡಿ ಮತ್ತು ಐಪಿಸಿ ಅಡಿಯಲ್ಲಿ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೀಗಾಗಿ, ಶೆಟ್ಟಿ ಅವರು ಈ ಪ್ರಕರಣ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News