6 ತಿಂಗಳಲ್ಲಿ ಶಿವಮೊಗ್ಗದಲ್ಲಿ ವಿಮಾನ ಹಾರಾಟ ನಡೆಸಬೇಕು: ಅಧಿಕಾರಿಗಳಿಗೆ ಬಿಎಸ್‌ವೈ ಕಟ್ಟುನಿಟ್ಟಿನ ಸೂಚನೆ

Update: 2019-12-14 17:36 GMT

ಬೆಂಗಳೂರು, ಡಿ. 14: ‘ಇನ್ನು ಆರು ತಿಂಗಳ ಒಳಗೆ ಶಿವಮೊಗ್ಗ ನಗರದಲ್ಲಿ ವಿಮಾನಗಳ ಹಾರಾಟ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ತನ್ನ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಒಂದು ವೇಳೆ ಆರು ತಿಂಗಳಲ್ಲಿ ವಿಮಾನಗಳ ಹಾರಾಟ ನಡೆಸದಿದ್ದರೆ ಅದಕ್ಕೆ ಅಧಿಕಾರಿಗಳನ್ನೆ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ವಿಮಾನ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು. ಆ ದೃಷ್ಟಿಯಿಂದ 4 ‘ಜಿ’ ಅನುಮತಿ ನೀಡಲು ಸೂಚಿಸಿದ್ದು, ಇದೇ ವೇಳೆ ರನ್ ವೇಯನ್ನು 1.2 ಕಿ.ಮೀ.ಯಿಂದ 2.1 ಕಿ.ಮೀ.ಗೆ ಹೆಚ್ಚಿಸಬೇಕು ಎಂದು ಅವರು ಸೂಚಿಸಿದರು.

ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ 40ಕೋಟಿ ರೂ.ನೀಡಿದ್ದು, ಕಾಮಗಾರಿ ತ್ವರಿತಗೊಳಿಸಬೇಕು. ಹೆಚ್ಚಿನ ಹಣಕಾಸಿನ ಅಗತ್ಯವಿದ್ದರೆ ಅದನ್ನೂ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದ ಯಡಿಯೂರಪ್ಪ, ವಾರದೊಳಗೆ ಈ ಸಂಬಂಧ ಅಗತ್ಯ ಎಲ್ಲ ದಾಖಲೆ-ಪತ್ರಗಳ ಕಾರ್ಯ ಪೂರ್ಣಗೊಳಿಸಬೇಕು ಎಂದರು.

ಸಿಗಂದೂರು ಸೇತುವೆ ನಿರ್ಮಾಣ ಸಂಬಂಧ ಈಗಾಗಲೇ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಚರ್ಚಿಸಿದ್ದು, ಅವರು ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಕೂಡಲೇ ಅನುಮೋದನೆ ಪಡೆದುಕೊಳ್ಳಬೇಕು. ಶಿವಮೊಗ್ಗ ರೈಲ್ವೆ ನಿಲ್ದಾಣ ಸಂಬಂಧ ಕೋಟೆ ಗಂಗೂರಿನಲ್ಲಿ ಭೂ ಸ್ವಾಧೀನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಸಲಹೆಗಾರ ಲಕ್ಷ್ಮಿ ನಾರಾಯಣ, ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News