ಯಾದಗಿರಿ: ‘ಪೌರತ್ವ ತಿದ್ದುಪಡಿ ಕಾಯ್ದೆ’ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Update: 2019-12-19 07:11 GMT

ಯಾದಗಿರಿ, ಡಿ. 15: ಕೇಂದ್ರ ಸರಕಾರದ ‘ಪೌರತ್ವ ತಿದ್ದುಪಡಿ ಮಸೂದೆ’ ವಿರೋಧಿಸಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ದಲಿತ, ಪ್ರಗತಿಪರ ಮತ್ತು ಮುಸ್ಲಿಮ್ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ರವಿವಾರ ಪಟ್ಟಣದಲ್ಲಿ ಸೇರಿದ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಇಲ್ಲಿನ ಟಿಪ್ಪು ಸುಲ್ತಾನ್ ವೃತ್ತದಿಂದ ಅಂಬೇಡ್ಕರ್ ವೃತ್ತದ ಮೂಲಕ ಮಹಾತ್ಮ ಗಾಂಧಿ ವೃತ್ತದ ವರೆಗೂ ಕಪ್ಪುಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಲ್ಲದೆ, ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೋಟು ರದ್ದತಿ, ಜಿಎಸ್ಪಿ ವಿಫಲತೆ, ಆರ್ಥಿಕ ಹಿಂಜರಿತ, ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಇನ್ನಿತರ ಗಂಭೀರ ವಿಚಾರಗಳನ್ನು ಮರೆಮಾಚಲು ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಮಸೂದೆ ಮೂಲಕ ದೇಶದ ಜನರ ಗಮನ ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸಿದೆ ಎಂದು ಮುಖಂಡರು ವಾಗ್ದಾಳಿ ನಡೆಸಿದರು.

ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಕಲಂ 14ರಲ್ಲಿ ಕಲ್ಪಿಸಿರುವ ಧಾರ್ಮಿಕ ಸ್ವಾತಂತ್ರಕ್ಕೆ ವಿರುದ್ಧವಾಗಿದೆ. ಮುಸ್ಲಿಮ್, ದಲಿತ, ಆದಿವಾಸಿಗಳನ್ನು ಹೊರಗಿಡುವ ಹುನ್ನಾರವನ್ನು ಕೇಂದ್ರ ಸರಕಾರ ನಡೆಸಿದೆ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಮುಖಂಡರು ಕಿಡಿಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News