×
Ad

ಸ್ಮಾರ್ಟ್‌ಸಿಟಿ ಕಾಮಗಾರಿ: ಮನಪಾ ಎನ್‌ಐಟಿಕೆಯಿಂದ ಪರಿಶೀಲನೆ

Update: 2019-12-16 20:11 IST

ಮಂಗಳೂರು, ಡಿ.16: ಸ್ಮಾರ್ಟ್‌ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಮಹಾನಗರ ಪಾಲಿಕೆ ಹಾಗೂ ಎನ್‌ಐಟಿಕೆ ವತಿಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆಗೊಳಪಡಿಸಲು ನಿರ್ಧರಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸೋಮವಾರ ಪಾಲಿಕೆಯಲ್ಲಿ ನಡೆದ ಸ್ಮಾರ್ಟ್‌ಸಿಟಿ ಅನುಷ್ಠಾನ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ನಿಗದಿತ ಅವಧಿಯ ಯೋಜನೆಯಾಗಿರುವುದರಿಂದ ಎಲ್ಲಾ ಕಾಮಗಾರಿಗಳು ಮುಕ್ತಾಯವಾದ ಬಳಿಕ ಮಹಾ ನಗರಪಾಲಿಕೆಗೆ ಹಸ್ತಾಂತರವಾಗಬೇಕಾಗುತ್ತದೆ. ನಂತರ ಯಾವುದೇ ಲೋಪದೋಷಗಳು ಉಂಟಾಗದಂತೆ ನಗರಪಾಲಿಕೆಗೆ ವಹಿಸುವ ಮೊದಲೇ ಕಾಮಗಾರಿಯ ಗುಣಮಟ್ಟ ಪರಿಶೀಲಿಸಲಾಗುವುದು ಎಂದರು.

ಮಂಗಳೂರು ಸ್ಮಾರ್ಟ್‌ಸಿಟಿ ಲಿ. ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಂಡ ನಂತರ ಮಹಾನಗರಪಾಲಿಕೆಗೆ ಹಸ್ತಾಂತರಿಸುವ ಮೊದಲು ಪರಿಶೀಲನೆಗೆ ಸಂಬಂಧಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಸ್ಮಾರ್ಟ್‌ಸಿಟಿಯಲ್ಲಿ ಕೈಗೊಳ್ಳಲಾಗುವ ಯೋಜನೆಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರಬೇಕು ಎಂದು ತಿಳಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಮಗಾರಿಗಳ ಅನುಷ್ಠಾನ ಸಂದರ್ಭ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗುವಂತೆ ನೋಡಿಕೊಳ್ಳಬೇಕು. ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ನಡೆಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಯೋಜನೆಯ ಸಂಪೂರ್ಣ ವಿವರ, ವೆಚ್ಚ ಹಾಗೂ ಗುತ್ತಿಗೆದಾರರ ಮಾಹಿತಿತಯುಳ್ಳ ಫಲಕವನ್ನು ಅಳವಡಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ನಗರದ ಆರ್‌ಟಿಒ ಸರ್ಕಲ್‌ನಿಂದ ಗಡಿಯಾರ ಗೋಪುರದವರಗೆ ರಸ್ತೆ ಅಭಿವೃದ್ಧಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಲು ತಾಕೀತು ಮಾಡಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಗಳು ಅನುಷ್ಠಾನ ಸಂದರ್ಭ ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್‌ಸಿಟಿ ಸಂಸ್ಥೆ ನಡುವೆ ಹೊಂದಾಣಿಕೆ ಇಲ್ಲದೆ ಕೆಲವು ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗಿದೆ ಎಂದು ಹೇಳಿದರು.
ಸ್ಮಾರ್ಟ್ ಶಾಲೆಗಳ ಆಯ್ಕೆ ಸಂದರ್ಭ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಆದ್ಯತೆ ನೀಡಬೇಕು. ಸ್ಮಾರ್ಟ್ ಬಸ್ ತಂಗು ದಾಣದ ವಿನ್ಯಾಸ ಹಾಗೂ ಯೋಜನಾ ವೆಚ್ಚದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನ ಇದ್ದು, ಈ ಬಗ್ಗೆ ಜನತೆಗೆ ಉತ್ತರಿಸಲಾಗದ ಪರಿಸ್ಥಿತಿ ಇದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳೂರು ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಈಗಾಗಲೇ ಸ್ಮಾರ್ಟ್ ರಸ್ತೆಯಲ್ಲಿ ಬರುವ ಸರಕಾರಿ ಕಚೇರಿಗಳಿಗೆ ಎಲ್‌ಇಡಿ ಲೈಟ್ ದೀಪಗಳ ಅಳವಡಿಕೆ ಹಾಗೂ ಹಂಪನಕಟ್ಟೆಯಲ್ಲಿ ಗಡಿಯಾರ ಗೋಪುರ ನಿರ್ಮಾಣ ಪೂರ್ಣಗೊಂಡಿದೆ. ಆರ್‌ಟಿಒ ಸರ್ಕಲ್‌ನಿಂದ ಗಡಿಯಾರ ಗೋಪುರದವರಗೆ ರಸ್ತೆ ಕಾಮಗಾರಿಯು ಜನವರಿ 30ರೊಳಗೆ ಪೂರ್ಣಗೊಳ್ಳಲಿದೆ. ವಲಯ 4ರಲ್ಲಿ ಒಳಚರಂಡಿ ಯೋಜನೆ ಪ್ರಗತಿಯಲ್ಲಿದೆ. ನೆಲ್ಲಿಕಾಯಿ ರಸ್ತೆ ಕಾಮಗಾರಿ ಮುಕ್ತಾಯಗೊಂಡಿದ್ದು ಮಿಷನ್ ಸ್ಟೀಟ್ ರಸ್ತೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಗರದ ವಿವಿಧೆಡೆ 14 ಸ್ಮಾರ್ಟ್ ಬಸ್ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯ ಎಸ್.ಆರ್. ದರದಂತೆ ನಡೆಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News