ಮಂಗಳೂರಿನ ಘಟನೆ ಬಗ್ಗೆ ಉನ್ನತ ಅಧಿಕಾರಿಗಳಿಂದ ತನಿಖೆ: ಸಿಎಂ ಯಡಿಯೂರಪ್ಪ
ಬೆಂಗಳೂರು, ಡಿ. 19: ರಾಜ್ಯದ ಜನತೆ ಯಾವುದೇ ವದಂತಿಗಳಿಗೆ ಕಿವಿಗೂಡದೆ ಶಾಂತಿ ಸಾಮರಸ್ಯವನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಮನವಿ ಮಾಡಿದ್ದಾರೆ.
ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಸ್ಲಿಮ್ ಸಮುದಾಯದ ಮುಖಂಡರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆಗೆ ಸಂಬಂಧಿಸಿದಂತೆ ಯಾವುದೇ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಕೋರಿದರು.
ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ಧರ್ಮಕ್ಕೆ ಸೇರಿದ ಭಾರತೀಯ ಪ್ರಜೆಯ ಹಕ್ಕು ಮತ್ತು ಸವಲತ್ತುಗಳಿಗೆ ದಕ್ಕೆ ತರುವುದಿಲ್ಲ. ಯಾವುದೇ ಸಮದಾಯ, ಧರ್ಮ, ಪಂಥಗಳಿಗೆ ಸೇರಿದ ಜನರಿಗೆ ರಕ್ಷಣೆ ನೀಡಲು ಹಾಗೂ ಅವರ ಹಕ್ಕುಗಳನ್ನು ಕಾಪಾಡುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ವಿಷಾದ: ಮಂಗಳೂರಿನಲ್ಲಿ ನಡೆದಿರುವ ಘಟನೆಗೆ ವಿಷಾಧವಿದೆ. ಈ ಕುರಿತಂತೆ ತನಿಖೆ ನಡೆಸಲು ಉನ್ನತ ಅಧಿಕಾರಿಗಳನ್ನು ಮಂಗಳೂರಿಗೆ ಕಳುಹಿಸಲಾಗುವುದು. ಈ ರೀತಿಯ ಅಹಿತಕರ ಘಟನೆ ನಡೆಯದಿರಲಿ ಎಂದು ಅವರು ಹೇಳಿದರು.
ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಉದ್ವೇಗಕ್ಕೆ ಒಳಗಾಗದೆ, ಅಶಾಂತಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟಕ್ಕೆ ಇಳಿಯದೆ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು.
ಶಾಸಕ ಎನ್.ಎ.ಹಾರಿಸ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಸ್ಲಿಂ ಸಮುದಾಯದ ಮುಖ್ಯಸ್ಥರ ನಿಯೋಗ ಭೇಟಿ ಮಾಡಿ ಚರ್ಚಿಸಿತು. ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.