×
Ad

ಹಿರಿಯ ಸಾಹಿತಿ ಪ್ರೊ.ಎಲ್.ಎಸ್.ಶೇಷಗಿರಿರಾವ್ ನಿಧನ

Update: 2019-12-20 14:15 IST

ಬೆಂಗಳೂರು, ಡಿ.20: ಹಿರಿಯ ಸಾಹಿತಿ ಪ್ರೊ.ಎಲ್.ಎಸ್.ಶೇಷಗಿರಿರಾವ್(95) ಶುಕ್ರವಾರ ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಗರದ ಜಯನಗರದ ಮಾರೇನಹಳ್ಳಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಂಜೆ 5ರ ಸುಮಾರಿಗೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ವೇಳೆ ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಬಂಧುಮಿತ್ರರು ಪಾಲ್ಗೊಂಡು ಶ್ರದ್ಧಾಂಜಲಿ ಸಲ್ಲಿಸಿದರು.

ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಹೊಂದಿದ್ದ ಅವರು ಎಲ್ಲೆಸ್ಸೆಸ್ ಎಂದೇ ಖ್ಯಾತರಾಗಿದ್ದರು. ಬೆಂಗಳೂರು, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿ, ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ, ಬೆಂಗಳೂರು ವಿವಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿದ್ದರು.

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ ಶೇಷಗಿರಿರಾವ್, 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿಗಳಾಗಿ, ಬಿಎಂಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿ ನ್ಯಾಷನಲ್ ಬುಕ್‌ಟ್ರಸ್ಟ್ ಸೇರಿದಂತೆ ಹಲವು ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

2007ರಲ್ಲಿ ಉಡುಪಿಯಲ್ಲಿ ನಡೆದ 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ಕಾವ್ಯಾನಂದ ಪುರಸ್ಕಾರ, ಬಿಎಂಶ್ರೀ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇಂಗ್ಲಿಷ್ ಸಾಹಿತ್ಯದ ಮೇರು ಕೃತಿಗಳನ್ನು ತಿಳಿಕನ್ನಡಕ್ಕೆ ಅನುವಾದಿಸಿರುವ ಅವರು, ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ವಿಮರ್ಶೆ, ಪಾಶ್ಚಾತ್ಯ ಸಾಹಿತ್ಯ ವಿಹಾರ, ಸಾಹಿತ್ಯ ವಿಶ್ಲೇಷಣೆ, ಇಂಗ್ಲಿಷ್ ಸಾಹಿತ್ಯ ಚರಿತ್ರೆ ಇತ್ಯಾದಿ ಕೃತಿಗಳು ಅವರ ಹೆಸರನ್ನು ಸಾಹಿತ್ಯ ವಿದ್ಯಾರ್ಥಿಗಳ ಮನಸ್ಸಿನಲ್ಲಿ ನೆಲೆಗೊಳಿಸಿವೆ.

ಸಾಮಾನ್ಯ ಮನುಷ್ಯ (ಕಾದಂಬರಿ), ಇದು ಜೀವನ, ಜಗದ ಜಾತ್ರೆಯಲ್ಲಿ, ಮುಟ್ಟಿದ ಗುರಿ ಮತ್ತು ಇತರ ಕಥೆಗಳು, ಮುಯ್ಯಿ ಎಂಬ ಕಥಾಸಂಕಲನಗಳನ್ನು ರಚಿಸಿದ್ದಾರೆ. ಹಂಪಿ ವಿಶ್ವವಿದ್ಯಾಲಯಕ್ಕೆ ಇಂಗ್ಲಿಷ್-ಕನ್ನಡ, ಕನ್ನಡ ಕನ್ನಡ ನಿಘಂಟನ್ನು ರಚಿಸಿಕೊಟ್ಟಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನುಬಳಿಗಾರ್, ಜೆಎನ್‌ಯು ಕನ್ನಡ ಅಧ್ಯಯನ ಪೀಠದ ನಿರ್ದೇಶಕ ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವು ಸಾಹಿತಿಗಳು ಪ್ರೊ.ಶೇಷಗಿರಿರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇಂಗ್ಲಿಷ್ ಬಾರದ ನಮಗೆಲ್ಲಾ ಇಂಗ್ಲಿಷ್ ಸಾಹಿತ್ಯದ ಬಗ್ಗೆ ಕನ್ನಡದಲ್ಲಿ ಬರೆದು ತಿಳಿಸಿದ ಹಿರಿಯ ಸಾಹಿತಿ ಪ್ರೊ.ಎಲ್.ಎಸ್.ಶೇಷಗಿರಿ ರಾವ್ ನಿಧನರಾಗಿರುವುದು ಕನ್ನಡ ಸಾಹಿತ್ಯ ಕ್ಷೇತ್ರದ ಇನ್ನೊಂದು ಕೊಂಡಿ ಕಳಚಿದಂತಾಗಿದೆ. ಅವರ ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ಕೃತಿಯು ನನಗೆ ಬಹಳ ಸಹಾಯ ಮಾಡಿದ ಪುಸ್ತಕ. ಲಂಕೇಶರ ರೊಟ್ಟಿ ಕತೆಯ ಬಗ್ಗೆ ಅವರು ಬರೆದ ವಿಮರ್ಶೆಯು ಕನ್ನಡದ ಅತ್ಯುತ್ತಮ ವಿಮರ್ಶಾ ಲೇಖನಗಳಲ್ಲಿ ಒಂದಾಗಿದೆ. ಹೀಗೆ ಸಾಹಿತ್ಯದ ಮೂಲಕ ನನ್ನ ಹಾಗೂ ನನ್ನ ತಲೆಮಾರಿನ ಅನೇಕರಿಗೆ ಮಾರ್ಗದರ್ಶನ ಮಾಡಿದ್ದ ಎಸ್.ಎಸ್.ಶೇಷಗಿರಿರಾವ್‌ಗೆ ನಮನಗಳು.

-ಪುುಷೋತ್ತಮ ಬಿಳಿಮಲೆ, ಹಿರಿಯ ಸಾಹಿತಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News