ಮಂಗಳೂರು: ಪೊಲೀಸ್ ಕಮಿಷನರ್ ವಿರುದ್ಧ ಕ್ರಮಕ್ಕೆ ಜೆಡಿಎಸ್ ಒತ್ತಾಯ
Update: 2019-12-21 22:51 IST
ಮಂಗಳೂರು, ಡಿ.21: ಗುರುವಾರ ಮಂಗಳೂರಿನಲ್ಲಿ ನಡೆದ ಹಿಂಸಾಚಾರ, ಗುಂಡೇಟಿಗೆ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಅವರೇ ಕಾರಣ. ಹಾಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗವೊಂದು ಶನಿವಾರ ಸರ್ಕ್ಯೂಟ್ ಹೌಸ್‌ನಲ್ಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ಮಂಗಳೂರಿನಲ್ಲಿ ಗೋಲಿಬಾರ್ ನಡೆಸುವ ಆವಶ್ಯಕತೆಯೇ ಇರಲಿಲ್ಲ. ಪೊಲೀಸರು ಆತುರದಿಂದ ಗೋಲಿಬಾರ್ ನಡೆಸಿ ಇಬ್ಬರನ್ನು ಬಲಿ ತೆಗೆದುಕೊಂಡಿದ್ದಾರೆ. 6 ಮಂದಿ ಗುಂಡೇಟಿನಿಂದ ಮತ್ತು ಹಲವು ಮಂದಿ ಪೊಲೀಸರ ಲಾಠಿ ಮತ್ತು ಕಲ್ಲೇಟಿನಿಂದ ಗಾಯಗೊಂಡಿದ್ದಾರೆ. ಹಾಗಾಗಿ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಜರುಗಿಸುವುದರೊಂದಿಗೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಿಯೋಗದಲ್ಲಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ವಿಟ್ಲ ಮುಹಮ್ಮದ್ ಕುಂಞಿ ತಿಳಿಸಿದ್ದಾರೆ.