‘ಮಂಗಳೂರು ಗಲಭೆ ಪ್ರಕರಣ’ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

Update: 2019-12-23 16:11 GMT

ಬೆಂಗಳೂರು, ಡಿ.23: ಎನ್‌ಆರ್‌ಸಿ ಹಾಗೂ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದಿರುವ ಪ್ರತಿಭಟನೆ ಹಾಗೂ ಗೋಲಿಬಾರ್ ಪ್ರಕರಣ ಕುರಿತು ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸೋಮವಾರ ನಗರದ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆಯ ಜೊತೆಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಮೂಲಕವು ತನಿಖೆ ನಡೆಸಲಾಗುವುದು ಎಂದರು.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಇನ್ನಾದರೂ ಮಂಗಳೂರು ಶಾಂತವಾಗಿರುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಎನ್‌ಆರ್‌ಸಿ ಹಾಗೂ ಸಿಎಎ ಜಾರಿಯಿಂದಾಗಿ ದೇಶದ ಯಾವ ಅಲ್ಪಸಂಖ್ಯಾತರಿಗೂ ತೊಂದರೆಯಾಗುವುದಿಲ್ಲ, ಅವರು ಆತಂಕಪಡುವ ಅಗತ್ಯವಿಲ್ಲ ಎಂದು ಈಗಾಗಲೇ ಸ್ವತಃ ಪ್ರಧಾನಿ ನರೇಂದ್ರ ಮೊದಿ ಸ್ಪಷ್ಟಣೆ ನೀಡಿದ್ದಾರೆ. ಆದರೂ, ಕಾಂಗ್ರೆಸ್‌ನವರು ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರಲ್ಲಿ ಗೊಂದಲ ಉಂಟು ಮಾಡುವ ಷಡ್ಯಂತ್ರ, ಪಿತೂರಿ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News