ತೇಜಸ್ವಿ ಸೂರ್ಯ, ಸಿ.ಟಿ.ರವಿ, ರೇಣುಕಾಚಾರ್ಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Update: 2019-12-23 17:01 GMT

ಬೆಂಗಳೂರು, ಡಿ.23: ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ, ಸಚಿವ ಸಿ.ಟಿ.ರವಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜುಗೆ ರಾಜ್ಯ ಕಾಂಗ್ರೆಸ್‌ನಿಂದ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರಕಾರ ಜಾರಿಗೆ ಮುಂದಾಗಿರುವ ಸಂವಿಧಾನ ವಿರೋಧಿ ಪೌರತ್ವ(ತಿದ್ದುಪಡಿ) ಕಾಯ್ದೆ ವಿರೋಧಿಸಿ ಜನತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಎಲ್ಲೆಡೆ ಜನರು ಸ್ವಯಂ ಪ್ರೇರಣೆಯಿಂದ ಪ್ರತಿಭಟನೆ ನಡೆಸಿದ್ದಾರೆ. ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟಿಸಿದ್ದು, ಆಳುವ ವರ್ಗಗಳಲ್ಲಿ ನಡುಕ ಹುಟ್ಟಿಸಿದೆ. ಹೋರಾಟಗಾರರನ್ನು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಮನವೊಲಿಸುವ ಮೂಲಕ ಪ್ರತಿಭಟನೆಗಳನ್ನು ಹಿಂಪಡೆಯುವಂತೆ ಮಾಡುವ ಬದಲಿಗೆ, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ಕಾನೂನು ಪರಿಸ್ಥಿತಿ ಹಡಗೆಡಿಸುವ ಕುತಂತ್ರವನ್ನು ಬಿಜೆಪಿ ಪಕ್ಷದ ಶಾಸಕರು, ಸಚಿವರು, ಸಂಸದರು ಮಾಡಿದ್ದಾರೆ. ತಮ್ಮ ಜವಾಬ್ದಾರಿ ಮರೆತು ಹೇಳಿಕೆ ನೀಡಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಗೋಧ್ರಾ ಘಟನೆಯು ಮರುಕಳಿಸುತ್ತದೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದರೆ, ಸಂಸದ ತೇಜಸ್ವಿ ಸೂರ್ಯ ಎದೆ ಸೀಳಿದರೆ ಒಂದಕ್ಷರ ಇಲ್ಲದವರು, ಪಂಕ್ಚರ್ ಹಾಕುವವರಿಂದ ಗಲಭೆ ಎಂದಿದ್ದಾರೆ. ಇನ್ನು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬಾರದೇ? ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎ.ಎನ್.ನಟರಾಜಗೌಡ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News