ಫೆ.9ರ ನಂತರ ಬಿಎಸ್‌ವೈ ಎಲ್ಲಿರಬೇಕೆಂದು ನಾವು ನಿರ್ಧರಿಸುತ್ತೇವೆ: ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಕೆ
ಹೊಸಪೇಟೆ, ಡಿ. 27: ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಶೇ.7.5ರಷ್ಟು ಮೀಸಲಾತಿ ಫೆ.9ರೊಳಗೆ ಘೋಷಣೆ ಮಾಡದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲಿರಬೇಕು ಎಂದು ನಾವು ನಿರ್ಧಾರ ಮಾಡುತ್ತೇವೆ ಎಂದು ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2020ರ ಫೆ.9ರಂದು ಹರಿಹರದ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ನಡೆಯಲಿದೆ. ಅಷ್ಟರೊಳಗೆ ಬಿಎಸ್‌ವೈ ಎಸ್ಟಿ ಮೀಸಲಾತಿ ಹೆಚ್ಚಳ ಮಾಡುವ ಘೋಷಣೆ ಮಾಡಬೇಕು. ಇಲ್ಲವಾದರೆ ಅವರು ಮನೆಯಲ್ಲಿ ಇರಬೇಕಾ ಅಥವಾ ವಿಧಾನಸೌಧದ ಮೂರನೇ ಮಹಡಿಯಲ್ಲಿ ಇರಬೇಕಾ ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಗುಡುಗಿದರು.
ಪರಿಶಿಷ್ಟ ಪಂಗಡಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಅದನ್ನು ಶೇ.7.5ಕ್ಕೆ ಹೆಚ್ಚಿಸುವಂತೆ 10 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಇದೀಗ ಅಧ್ಯಯನಕ್ಕೆ ನ್ಯಾ.ನಾಗಮೋಹನ್‌ದಾಸ್ ಆಯೋಗ ರಚಿಸಲಾಗಿದೆ. ಆಯೋಗ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿದರೆ ಫೆ.9ರಂದು ಅಧಿಕೃತವಾಗಿ ಘೋಷಿಸಬೇಕೆಂದು ಆಗ್ರಹಿಸಿದರು.
ವಾಲ್ಮೀಕಿ ಸಮುದಾಯವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಆದರೆ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಚುನಾವಣೆ ವೇಳೆ ವಾಲ್ಮೀಕಿ ಸಮಾಜದ ಒಬ್ಬರಿಗೆ ಉಪಮುಖ್ಯಮಂತ್ರಿ ಮಾಡಲಾಗುವುದು ಎಂದು ಬಿಜೆಪಿ ಭರವಸೆ ನೀಡಿತ್ತು. ಅದರಂತೆ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಹಂಪಿ ಕನ್ನಡ ವಿಶ್ವ ವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರಿಡಬೇಕು ಎಂಬುದು ಸೇರಿದಂತೆ ಸಮಾಜದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.