×
Ad

ಸರಕಾರದ ಅಭಿವೃದ್ಧಿ ಪರ ಯೋಜನೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

Update: 2019-12-28 22:31 IST

ಬೆಂಗಳೂರು, ಡಿ.28: ಸರಕಾರದ ಅಭಿವೃದ್ಧಿ ಪರ ವಿವಿಧ ಯೋಜನೆಗಳ ಮಾಹಿತಿಯುಳ್ಳ ಛಾಯಾಚಿತ್ರ ಪ್ರದರ್ಶನದಿಂದ ಜ್ಞಾನ ಮತ್ತು ಮಾಹಿತಿ ಪಡೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಶನಿವಾರ ದೊಡ್ಡಬಳ್ಳಾಪುರದ ಡಾ.ಆನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವ ಹಲವು ಅಭಿವೃದ್ಧಿ ಯೋಜನೆಗಳ ಮಾಹಿತಿ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಛಾಯಾಚಿತ್ರ ಪ್ರದರ್ಶನದಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳಾದ ಬಡತನ ನಿರ್ಮೂಲನೆ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು ಮತ್ತು ನೈರ್ಮಲ್ಯ ಶಕ್ತಿ, ಅಗ್ಗವಾದ ಮತ್ತು ಶುದ್ಧ ಶಕ್ತಿ, ಗೌರವಾನ್ವಿತ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಉದ್ಯಮ, ಆವಿಷ್ಕಾರ ಮತ್ತು ಮೂಲಸೌಕರ್ಯಗಳು.

ಅಸಮಾನತೆಗಳ ಇಳಿಕೆ, ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಹವಾಮಾನದ ಬಗ್ಗೆ ಕ್ರಮ, ಜಲದ ಜೀವರಾಶಿ, ಭೂಮಿ ಮೇಲಿನ ಜೀವರಾಶಿ, ಶಾಂತಿಯ ನ್ಯಾಯ ಮತ್ತು ಸದೃಢ ಸಂಸ್ಥೆಗಳು, ಗುರಿಮುಟ್ಟಲು ಸಹಭಾಗಿತ್ವದ ಕುರಿತು ಮಾಹಿತಿ ನೀಡುವ ಫಲಕಗಳನ್ನು ವಿದ್ಯಾರ್ಥಿಗಳು ಉತ್ಸುಕತೆಯಿಂದ ವೀಕ್ಷಿಸಿದರು.

ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಮಾಡಿದ ಪರಿಹಾರ, ಪ್ರವಾಹ ಪೀಡಿತ ಪ್ರದೇಶಗಳ ಘೋಷಣೆ, ರೈತ ಕುಟುಂಬಗಳ ಬೆಳೆ ಹಾನಿಗೆ ಸರಕಾರ ನೀಡುವ ಪರಿಹಾರ ಧನದ ಕುರಿತು ಮಾಹಿತಿ, ಸಾಮೂಹಿಕ ವಿವಾಹ ಕಾರ್ಯಕ್ರಮದ ಮಾಹಿತಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೀಡುವ ಶೈಕ್ಷಣಿಕ ಸಾಲ ಮತ್ತು ವಿದ್ಯಾರ್ಥಿ ವೇತನ.

ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಲ್ಯಾಣ ಮಂಡಳಿಯ ಫಲಾನುಭವಿಗಳಿಗೆ ನೀಡುವ ಸವಲತ್ತುಗಳ ಕುರಿತ ಮಾಹಿತಿ ಮತ್ತು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸಹಾಯಧನ ವಿತರಿಸಿರುವ ಬಗ್ಗೆ, ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿ ಕುರಿತ ಮಾಹಿತಿ ಸೇರಿದಂತೆ ಇನ್ನಿತರ ಇಲಾಖೆಗಳ ಸಾಧನೆಗಳ ಕುರಿತು ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ, ರಾಜ್ಯ ತರಬೇತಿ ಆಯುಕ್ತೆ ಕೆ.ವಿ.ಶ್ಯಾಮಲಾ, ಬೆಂಗಳೂರು ಆಕಾಶವಾಣಿ ಕೇಂದ್ರದ ನಿಲಯ ನಿರ್ದೇಶಕಿ ನಿರ್ಮಲಾ ಎಲಿಗಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಸಹಾಯಕಿ ಹೇಮಾವತಿ ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News