×
Ad

ಶಾರದಾ ಡೈಮಂಡ್ ವಿರುದ್ಧ ಪ್ರಕರಣ ದಾಖಲು ವಿಚಾರ: ಇಬ್ಬರು ಪೊಲೀಸರಿಗೆ ದಂಡ ವಿಧಿಸಿದ ಹೈಕೋರ್ಟ್

Update: 2020-01-02 22:06 IST

ಬೆಂಗಳೂರು, ಜ.2: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿರುವ ಹೈಕೋರ್ಟ್ ಶ್ರೀರಾಂಪುರ ಠಾಣಾ ಇನ್ಸ್‌ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗೆ ತಲಾ 10 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದೆ.

ಈ ಕುರಿತಂತೆ ಶಾರದಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸುಪ್ರೀಂಕೋರ್ಟ್ ಅಸಿಂಧುಗೊಳಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಕಲಂ 66(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಹಾಗೂ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿಯನ್ನೂ ಪಡೆಯದೆ ಪ್ರಕರಣ ದಾಖಲಿಸಲಾಗಿದೆ ಎಂಬ ಹಿನ್ನೆಲೆಯಲ್ಲಿ ಶ್ರೀರಾಂಪುರ ಠಾಣಾ ಪೊಲೀಸರಿಗೆ ತಲಾ 10 ಸಾವಿರ ರೂ.ದಂಡ ವಿಧಿಸಿ ಆದೇಶ ಹೊರಡಿಸಿದರು.

ಪ್ರಕರಣವೇನು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಬರೆದಿದ್ದರು ಎನ್ನಲಾದ ನಕಲಿ ಪತ್ರವನ್ನು ಶಾರದಾ ಅವರು ಸಾಮಾಜಿಕ ಜಾಲತಾಣದಲ್ಲಿ 2019ರ ಎ.16ರಂದು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳಲ್ಲಿ ಹುರುಳಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ2000ರ ಕಲಂ 66 ಎ ಪ್ರಕಾರ ನನ್ನ ವಿರುದ್ಧ ಪ್ರಕರಣ ಹೂಡಲಾಗಿದೆ. ಆದರೆ, ಸುಪ್ರೀಂಕೋರ್ಟ್ ಈ ಕಲಂ ಅನ್ನು 2015ರಲ್ಲಿ ರದ್ದುಗೊಳಿಸಿದೆ. ಹೀಗಾಗಿ, ಪ್ರಕರಣ ರದ್ದುಗೊಳಿಸಬೇಕು ಎಂಬುದು ಅರ್ಜಿದಾರರ ಕೋರಿಕೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News