ರಾಜಕೀಯ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ: ಸಚಿವ ಸಿ.ಸಿ.ಪಾಟೀಲ್

Update: 2020-01-03 17:03 GMT

ಬೆಂಗಳೂರು, ಜ. 3: ಅಕ್ರಮ ಮರಳು ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ. ಅಲ್ಲದೆ, ಈ ಬಗ್ಗೆ ಯಾವುದೇ ರಾಜಕೀಯ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಅರಣ್ಯ ಇಲಾಖೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ನಿಲ್ಲಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಇನ್ನೂ ನಡೆಯುತ್ತಿದ್ದು, ಸಂಪೂರ್ಣ ನಿಲ್ಲಿಸಲಾಗುವುದು ಎಂದರು.

ರಾಜ್ಯದಲ್ಲಿ ಅಗತ್ಯವಿರುವಷ್ಟು ಮರಳಿನ ಲಭ್ಯತೆ ಇದ್ದು, ಸಮರ್ಪಕವಾಗಿ ಪೂರೈಕೆ ಮಾಡಲಾಗುತ್ತಿದೆ. ಮರಳು ಗಣಿಗಾರಿಕೆಗೆ ತೆಲಂಗಾಣ ರಾಜ್ಯದ ಮಾದರಿಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಶೀಘ್ರದಲ್ಲೆ ಅಧಿಕಾರಿ ತಂಡ ಆ ರಾಜ್ಯಕ್ಕೆ ತೆರಳಲಿದೆ ಎಂದರು.

ಮಲೇಶಿಯ ಮರಳು ಆಮದಿಗೆ ಹಿಂದಿನ ಸರಕಾರ ತೀರ್ಮಾನಿಸಿದ್ದು, ಈ ಸಂಬಂಧ ಒಂದೆರಡು ದಿನಗಳಲ್ಲಿ ಸಿಎಂ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಆಮದು ಸಂಬಂಧ ಅಕ್ರಮ ನಡೆದಿದ್ದರೆ ತಪ್ಪಿತಸ್ತರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.

ಸಂಪರ್ಕ ಕೇಂದ್ರಗಳಿಗೆ ಕ್ಯಾಲೆಂಡರ್: ಅರಣ್ಯ ಸಂರಕ್ಷಣೆ, ವನ್ಯಜೀವಿಗಳ ಬಗ್ಗೆ ರೈತರು ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡುವ ದೃಷ್ಟಿಯಿಂದ ವಿಶೇಷವಾಗಿ ರೂಪಿಸಿರುವ ಇಲಾಖೆ ಕ್ಯಾಲೆಂಡರ್‌ನ್ನು ರಾಜ್ಯದ ಎಲ್ಲ ರೈತ ಸಂಪರ್ಕ ಕೇಂದ್ರಗಳಿಗೂ ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

‘ಸಚಿವ ಸ್ಥಾನ, ಖಾತೆ ನೀಡುವುದು ಮುಖ್ಯಮಂತ್ರಿ ಯಡಿಯೂರಪ್ಪನವರ ಪರಮಾಧಿಕಾರ. ಅದನ್ನು ಯಾರೂ ಪ್ರಶ್ನಿಸಲು ಯಾರಿಂದಲೂ ಸಾಧ್ಯವಿಲ್ಲ. ನನಗೆ ಮಂತ್ರಿ ಸ್ಥಾನ ನೀಡುವುದು ಅಥವಾ ಬಿಡುವುದು ಅವರಿಗೇ ಬಿಟ್ಟ ವಿಚಾರ’

-ಸಿ.ಸಿ.ಪಾಟೀಲ್ , ಅರಣ್ಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News