ಜ.8ರಂದು ರಾಷ್ಟ್ರವ್ಯಾಪಿ ಮುಷ್ಕರ: ಸಿಐಟಿಯು ನೇತೃತ್ವದ ಕಾರ್ಮಿಕ ಸಂಘಟನೆಗಳ ಬೆಂಬಲ

Update: 2020-01-06 12:00 GMT

ಮಡಿಕೇರಿ, ಜ.6: ದೇಶದ ದುಡಿಯುವ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಜ.8ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು)ನ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಮಹಾದೇವ ಹಾಗೂ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಅವರುಗಳು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಮುಷ್ಕರ ನಡೆಸಲಾಗುತ್ತಿದ್ದು, ಜಿಲ್ಲೆಯ, ತೋಟ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಬಿಸಿಯೂಟ ನೌಕರರೂ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಧರಣಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.

ಮುಷ್ಕರಕ್ಕೆ ಬೆಂಬಲ ನೀಡುವಂತೆ ಈಗಾಗಲೇ ಚೇಂಬರ್ ಆಫ್ ಕಾಮರ್ಸ್, ಖಾಸಗಿ ಬಸ್ ಮಾಲಕರು, ಆಟೋ ಚಾಲಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದ ಪ್ರಮುಖರು, ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸುವ ಪ್ರತಿಯೊಬ್ಬರೂ ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಮಿಕರಿಗೆ ರಾಷ್ಟ್ರೀಯ ಸಮಾನ ಕನಿಷ್ಟ ವೇತನವನ್ನು 21 ಸಾವಿರ ರೂ.ಗಳಿಗೆ ನಿಗದಿ ಮಾಡಬೇಕು. ಕಾರ್ಪೋರೇಟ್ ಬಂಡವಾಳದ ಪರವಾದ ಮತ್ತು ಕಾರ್ಮಿಕ ವಿರೋಧಿಯಾದ ಕಾರ್ಮಿಕ ಕಾನೂನುಗಳ ಸಂಹಿತೀಕರಣ ಕೈಬಿಡಬೇಕು, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಎಲ್ಲರಿಗೂ ಸರಕಾರದಿಂದಲೇ ಕನಿಷ್ಟ 10 ಸಾವಿರ ರೂ.ಗಳ ಖಾತ್ರಿ ಪಿಂಚಣಿ ಜಾರಿ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುದಾನ ನೀಡಬೇಕು ಮತ್ತು  ಶಾಸನಬದ್ಧ ಭವಿಷ್ಯ ನಿಧಿ ಮತ್ತು ಪಿಂಚಣಿ ನೀಡಬೇಕು ಎಂಬ ಬೇಡಿಕೆಗಳನ್ನು ಈ ಸಂದರ್ಭ ಸರಕಾರಗಳ ಮುಂದಿಡಲಾಗುವುದು ಎಂದು ಅವರು ಹೇಳಿದರು.

ಗ್ರಾಮೀಣ ಮತ್ತು ನಗರದ ಎಲ್ಲಾ ಕುಟುಂಬಗಳನ್ನೊಳಗೊಂಡ ಸಮರ್ಪಕವಾದ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಬೇಕು. ಹೆಚ್ಚಿನ ದಿನಗಳ ಕೆಲಸ ಮತ್ತು ಬಜೆಟ್ ಹೆಚ್ಚಳದೊಂದಿಗೆ ಗ್ರಾಮೀಣ ಯದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಬೇಕು ಹಾಗೂ ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೆ ತರಬೇಕು.  ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ಸೂಕ್ತವಾದ ಸಂಗ್ರಹ ಸೌಲಭ್ಯದೊಂದಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು, ರೈತರ ಮತ್ತು ಕೂಲಿ ಕಾರ್ಮಿಕರ ಸಾಲ ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ದೇಶದಲ್ಲಿ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ನೀಡಿದ ಭರವಸೆಗಳೆಲ್ಲವೂ ಕಳೆದ 6 ವರ್ಷಗಳಲ್ಲಿ ಹುಸಿಯಾಗಿವೆ. ದೇಶದಲ್ಲಿ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಲಾಗಿತ್ತು. ಆದರೆ ಇರುವ ಉದ್ಯೋಗಿಗಳಿಗೆ ಕೆಲಸವಿಲ್ಲದಂತಾಗಿದೆ. ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಕೇಂದ್ರ ಸರಕಾರ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಖಾಸಗೀಕರಣವನ್ನು ನಿಲ್ಲಿಸದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದೇಶದಲ್ಲಿ ತೀವ್ರವಾಗುತ್ತಿರುವ ಆರ್ಥಿಕ ಹಿಂಜರಿತ, ಕುಸಿಯುತ್ತಿರುವ ಜಿಡಿಪಿ, ಹೆಚ್ಚುತ್ತಿರುವ ನಿರುದ್ಯೋಗ, ಆದಾಯಗಳಲ್ಲಿ ಇಳಿಮುಖ, ಆಳವಾಗುತ್ತಿರುವ ಬಡತನ, ರಾಷ್ಟ್ರೀಯ ಸಂಪತ್ತುಗಳ ವಿದೇಶೀಕರಣ, ದೇಶೀಯ ಉತ್ಪಾದಕ ಸಾಮಥ್ರ್ಯಗಳ ವಿನಾಶದಿಂದ ಕೈಗಾರಿಕೆಗಳ ನಾಶ, ಬಡವ-ಶ್ರೀಮಂತರ ನಡುವಿನ ಅಸಮಾನತೆ ಹೆಚ್ಚಳ, ಕೃಷಿ ನಾಶ ಮತ್ತು ಗ್ರಾಮೀಣ ಬಿಕ್ಕಟ್ಟು ಹೀಗೆ ಪ್ರತಿಯೊಂದು ಕ್ಷೇತ್ರವೂ ಅತ್ಯಂತ ಗಂಭೀರ ಪರಿಸ್ಥಿತಿಗೆ ನೂಕಲ್ಪಟ್ಟು ಭಾರತದ ಭವಿಷ್ಯ ಆತಂಕಕಾರಿ ಹಂತವನ್ನು ತಲುಪುವಂತಾಗಿದೆ ಎಂದು ಅವರು ಟೀಕಿಸಿದರು.

ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರಕಾರ 44 ಕಾರ್ಮಿಕ ಕಾನೂನುಗಳನ್ನು ನಾಶ ಮಾಡಿ ವೇತನ ಸಂಹಿತೆ ಮತ್ತು ವೃತ್ತಿ ಆರೋಗ್ಯ, ಸುರಕ್ಷತೆ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಗಳನ್ನು ಅಂಗೀಕರಿಸಿದೆ. ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ದೇಶದ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದ್ದರೂ ಅದನ್ನು ಜಾರಿಗೆ ತಂದಿಲ್ಲ. ಅಸಂಘಟಿತ ಕಾರ್ಮಿಕರ ಪರಿಸ್ಥಿತಿ ಬಿಗಡಾಯಿಸಿದ್ದು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಆಟೋ,ಟ್ಯಾಕ್ಸಿ, ಬಸ್, ಲಾರಿ ಮುಂತಾದ ಸಾರಿಗೆ ಕಾರ್ಮಿಕರು ಬೀದಿಬದಿ ವ್ಯಾಪರಿಗಳು, ಮನೆಕೆಲಸಗಾರರು, ಹಮಾಲಿ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳಿದ್ದರೂ, ಸಾಮಾಜಿಕ ಸುರಕ್ಷಾ ಕೋಡ್ ಮೂಲಕ ಅವುಗಳಲ್ಲಿನ ಹಣವನ್ನು ದೋಚಲು ಕೇಂದ್ರ ಸರಕಾರ ಹೊರಟಿದೆ. ಇದರಿಂದಾಗಿ ನಿವೃತ್ತಿಯಾದವರಿಗೆ ಸಕಾಲದಲ್ಲಿ ಪಿಂಚಣಿ ದೊರೆಯುತ್ತಿಲ್ಲ ಎಂದು ದೂರಿದರು.

ಕೇಂದ್ರ ಸರಕಾರದ ಈ ಎಲ್ಲಾ ನೀತಿಗಳನ್ನು ವಿರೋಧಿಸಿ ವಿವಿಧ ಕ್ಷೇತ್ರಗಳ ಕಾರ್ಮಿಕರು ಜ.8ರಂದು ಪೂರ್ವಾಹ್ನ ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕು ಕೇಂದ್ರಗಳಲ್ಲಿ ಹಾಗೂ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ನಡೆಸುವ ಮೂಲಕ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸರಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಆರ್ ಭರತ್, ಎನ್.ಡಿ.ಕುಟ್ಟಪ್ಪನ್, ಖಜಾಂಚಿ ಹೆಚ್.ಬಿ.ರಮೇಶ್ ಹಾಗೂ ಉಪ ಕಾರ್ಯದರ್ಶಿ ರಾಚಪ್ಪಾಜಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News