ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಿಎಂಗೆ ಗಡುವು: ವಾಲ್ಮೀಕಿ ಸ್ವಾಮೀಜಿ ನೇತೃತ್ವದಲ್ಲಿ ಒಗ್ಗೂಡಿದ ಸಮುದಾಯದ ಶಾಸಕರು
ಬೆಂಗಳೂರು, ಜ. 6: ಪರಿಶಿಷ್ಟ ಪಂಗಡ(ಎಸ್ಟಿ)ದ ಜನಸಂಖ್ಯೆಗೆ ಅನುಗುಣವಾಗಿ ಶೇ.7.5ರಷ್ಟು ಮೀಸಲಾತಿ, ವಾಲ್ಮೀಕಿ ಸಮುದಾಯ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮಿ ನೇತೃತ್ವದಲ್ಲಿ ಸಮುದಾಯದ ಸಚಿವರು, ಶಾಸಕರ ಉಪಸ್ಥಿತಿಯಲ್ಲಿ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶಾಸಕರಾದ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ, ರಾಜುಗೌಡ, ಶಿವನಗೌಡ ನಾಯಕ್, ಕಂಪ್ಲಿ ಗಣೇಶ್, ಸಂಸದ ದೇವೇಂದ್ರಪ್ಪ ಸೇರಿ ಇನ್ನಿತರರು ಭಾಗವಹಿಸಿದ್ದರು.
ಎಸ್ಟಿಗೆ ಪ್ರಸ್ತುತ ಶೇ.3ರಷ್ಟು ಮೀಸಲಾತಿ ನೀಡುತ್ತಿದ್ದು, ಸಮುದಾಯದ ಜನಸಂಖ್ಯೆಗೆ ಇದು ಸಾಕಾಗುತ್ತಿಲ್ಲ. ಹೀಗಾಗಿ ಎಸ್ಟಿಗೆ ಶೇ.7.5ರಷ್ಟು ಮೀಸಲಾತಿ, ಸಮುದಾಯದ ಒಬ್ಬರಿಗೆ ಡಿಸಿಎಂ ಸ್ಥಾನ, ವಾಲ್ಮೀಕಿ ಸಮಾಜಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ, ಹಂಪಿ ಕನ್ನಡ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಗೆ ಮಾಹಿತಿ ನೀಡಲು ಕೋರಿದ್ದು, ಆರು ತಿಂಗಳ ಕಾಲಾವಕಾಶ ಕೇಳಿದ್ದು, ನೀಡಲಾಗಿದೆ. ವರದಿ ನೀಡಿದ ಕೂಡಲೇ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವುದು ಎಂದು ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ರಾಜೀನಾಮೆ ಎಚ್ಚರಿಕೆ: ‘ಎಸ್ಟಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ಸಮಿತಿ ಇನ್ನೂ ಆರು ತಿಂಗಳೊಳಗೆ ವರದಿ ನೀಡಬೇಕು. ಇಲ್ಲವಾದರೆ ಶ್ರೀರಾಮುಲು, ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಸೇರಿದಂತೆ ಸಮುದಾಯದ ಎಲ್ಲ ಶಾಸಕರು ರಾಜೀನಾಮೆ ನೀಡಲಿದ್ದಾರೆ’ ಎಂದು ಪ್ರಸನ್ನಾನಂದ ಸ್ವಾಮಿ ಪರೋಕ್ಷ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.
ಮುಖಾಮುಖಿ
‘ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿಗೆ ಬಿದ್ದಿರುವ ಬಿ. ಶ್ರೀರಾಮುಲು ಮತ್ತು ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖಾಮುಖಿಯಾಗಿದ್ದಲ್ಲದೆ, ಪರಸ್ಪರ ಹಸ್ತಲಾಘವ ನೀಡುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿತ್ತು’