ಎಸಿಬಿಯನ್ನು ಬಲವಾಗಿ ಸಮರ್ಥಿಸಿಕೊಂಡ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ

Update: 2020-01-09 18:13 GMT

ಬೆಂಗಳೂರು, ಜ.9: ಕರ್ನಾಟಕ ಲೋಕಾಯುಕ್ತ ಪೊಲೀಸರ ಬದಲಿಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಎಫ್‌ಐಆರ್ ದಾಖಲಿಸಿಕೊಳ್ಳಲು ಅನುಮತಿ ನೀಡಿರುವುದನ್ನು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. 

ಎಸಿಬಿಯ ಸಂವಿಧಾನದ ಸಿಂಧುತ್ವವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್‌ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಎಜಿ ಅವರು ಎಸಿಬಿ ಅನ್ನು ಸಮರ್ಥಿಸಿಕೊಂಡರು. ಅಡ್ವೊಕೇಟ್ ಜನರಲ್ ಅವರು ವಾದಿಸಿ, ಚುನಾಯಿತ ಸರಕಾರದ ಉದ್ದೇಶ ಭ್ರಷ್ಟಾಚಾರವನ್ನು ತಡೆಯುವುದಾಗಿದೆ. ಹೀಗಾಗಿ, ಎಸಿಬಿಗೆ ಎಫ್‌ಐಆರ್ ದಾಖಲಿಸಿಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆ ಎಂದು ಪೀಠಕ್ಕೆ ತಿಳಿಸಿದರು.

ಪಿಸಿ ಕಾಯ್ದೆಯಡಿ ಅಪರಾಧಗಳನ್ನು ತನಿಖೆ ಮಾಡಲು ಎಸಿಬಿಯನ್ನು ರಚಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಎರಡೂ ಒಂದೇ ಆಗಿದೆ ಎಂದು ಪೀಠಕ್ಕೆ ತಿಳಿಸಿದರು. ಕರ್ನಾಟಕ ಲೋಕಾಯುಕ್ತ ಪೊಲೀಸರು, ಎಫ್‌ಐಆರ್ ದಾಖಲೆಗೆ ಅವಕಾಶ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೇಮಕ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ಬಿಜೆಪಿ ಬಲವಾಗಿ ವಿರೋಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News