ಕುಮಾರಸ್ವಾಮಿ ಪೊಲೀಸರ ವಿರುದ್ಧ ಆರೋಪ ಮಾಡಿದ್ದು ಸರಿಯಲ್ಲ: ಸಚಿವ ಶೆಟ್ಟರ್

Update: 2020-01-10 11:46 GMT

ಹುಬ್ಬಳ್ಳಿ, ಜ.10: ಮಂಗಳೂರು ಗಲಭೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೊಲೀಸರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಪೊಲೀಸರ ನೈತಿಕತೆಯನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಗೃಹ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮಹದಾಯಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಸರ್ವ ಪಕ್ಷ ಮುಖಂಡರು ಸಕಾರಾತ್ಮಕವಾಗಿ ನಡೆದುಕೊಂಡರೆ ಸಮಸ್ಯೆ ಇತ್ಯರ್ಥವಾಗಲಿದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಸರಕಾರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಲಿಂಗಾಯತ ಸಚಿವರನ್ನು ಸಂಪುಟದಿಂದ ಕೈಬಿಡುವಂತಹ ಆಧಾರ ರಹಿತ ಊಹಾಪೋಹಗಳಿಗೆ ನಾನು ಉತ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News