ವಿವೇಕಾನಂದರು ಯುವ ಜನತೆಯ ಪ್ರತಿನಿಧಿ: ರಘುಪತಿ ಭಟ್
ಉಡುಪಿ ಜ.12: ಸ್ವಾಮಿ ವಿವೇಕಾನಂದರು ಯುವಜನತೆಯ ಪ್ರತಿನಿಧಿ ಯಾಗಿದ್ದು, ವಿದ್ಯಾರ್ಥಿಗಳು ಪೌರತ್ವ ಕಾಯಿದೆಯನ್ನು ಸರಿಯಾಗಿ ಅಧ್ಯಯನ ಮಾಡಿ ಜಾತ್ಯತೀತ ರಾಷ್ಟ್ರವಾಗಿರುವ ಭಾರತವನ್ನು ಬಲಪಡಿಸುವ ಕೆಲಸ ಮಾಡ ಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಪೂರ್ಣಪ್ರಜ್ಞ ಕಾಲೇಜು, ಎಂಜಿಎಂ ಕಾಲೇಜು, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು, ಮಣಿಪಾಲ ಮಾಧವ ಪೈ ಮೆಮೋರಿಯಲ್ ಕಾಲೇಜು ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ರವಿವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಯುವಸಬಲೀಕರಣ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತಿದ್ದರು.
ವಿಶ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದ ಮಾಡಿರುವ ಭಾಷಣ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ಇಂತಹ ಮಹನೀಯರ ಜಯಂತಿಗಳು ಅಗತ್ಯವಾಗಿವೆ. ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು. ಆದರೆ ಇತ್ತೀಚೆಗೆ ಕೆಲವು ವಿಷಯಗಳಲ್ಲಿ ಯುವ ಜನತೆಯನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಪೌರತ್ವ ಕಾಯಿದೆಯ ಅನುಷ್ಠಾನದಿಂದ ಪ್ರಸ್ತುತ ಭಾರತದಲ್ಲಿರುವ ಯಾವುದೇ ಪ್ರಜೆಗೂ ತೊಂದರೆಯಾಗುವುದಿಲ್ಲ. ಆದರೂ ಕೂಡ ವಿದ್ಯಾರ್ಥಿ ಗಳಲ್ಲಿ ಈ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಕುರಿತ ಕಾನೂನನ್ನು ಸರಿಯಾಗಿ ಅರಿತುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸ್ವಾಮೀ ವಿವೇಕಾನಂದರ ಕುರಿತು ಪ್ರಧಾನ ಭಾಷಣ ಮಾಡಿದ ನಿಟ್ಟೆ ಡಾ. ಎನ್.ಎಸ್.ಎ.ಎಂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ಅಕ್ಷತಾ ಗೋಖಲೆ, ಆಧ್ಯಾತ್ಮಕ ಚಿಂತನೆ ಮೂಲಕ ಜಗತ್ತಿಗೆ ಭಾರತದ ಜ್ಞಾನದ ಚಿಂತನೆಯನ್ನು ಸಾರಿದ ವಿವೇಕಾನಂದರು, ಭಾರತದಲ್ಲಿ ವೈಜ್ಞಾನಿಕ ಕ್ರಾಂತಿಗೂ ಕಾರಣರಾಗಿ ದ್ದರು. ವಿವೇಕಾನಂದರು ಭಾರತದ ಯುವ ಜನತೆಗೆ ಶೇಷ್ಠ ಚಿಂತನೆ ಮತ್ತು ಸಂದೇಶಗಳನ್ನು ನೀಡಿದ್ದಾರೆ. ಯುವ ಜನತೆ ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಕ್ಕಾಗಿ ಬದುಕುವುದನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಜಯಂತಿ ಕುರಿತು ಜಿಲ್ಲೆಯ ಕಾಲೇಜು ವಿದ್ಯಾರ್ಥಿ ಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಬಹುಮಾನ ವಿತರಿಸಿದರು. ಕಾಲೇಜು ಶಿಕ್ಷಣ ಇಲಾಖೆಯಿಂದ ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.
ಜಿಪಂ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಸ್ವಾಗತಿಸಿದರು. ಡಾ.ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ನಿತ್ಯಾನಂದ ವಂದಿಸಿದರು. ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಯಿತು.