ಕಪಾಲ ಬೆಟ್ಟ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಬೊಮ್ಮಾಯಿ

Update: 2020-01-13 16:52 GMT

ಬೆಂಗಳೂರು, ಜ. 13: ಕನಕಪುರದ ಹಾರೋಬೆಲೆ ಬಳಿಯ ಕಪಾಲಬೆಟ್ಟದ ವಿವಾದ ಹೊಸದೇನಲ್ಲ. ಬಹಳ ಹಿಂದಿನಿಂದ ಮುನೇಶ್ವರ ಬೆಟ್ಟ ಮತ್ತು ಏಸು ಬೆಟ್ಟದ ವಿವಾದ ಇತ್ತು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಏಸು ಬೆಟ್ಟದ ವಿವಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತು. ಬಹಳ ಹಿಂದಿನಿಂದಲೇ ವಿವಾದ ಹುಟ್ಟು ಹಾಕುವ ಕೆಲಸ ನಡೆಯುತ್ತಿದೆ ಎಂದು ದೂರಿದರು.

ಕಪಾಲ ಬೆಟ್ಟದ ವಿವಾದಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್. ಅಶೋಕ್ ಪರಿಶೀಲನೆ ನಡೆಸುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಗೃಹ ಸಚಿವನಾಗಿ ನನ್ನ ವ್ಯಾಪ್ತಿಗೆ ಬರುತ್ತದೆ. ಕಾನೂನು ಸುವ್ಯವಸ್ಥೆ ಯಾವುದೇ ದಕ್ಕೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಪಾಲ ಬೆಟ್ಟದ ವಿವಾದ ಸೃಷ್ಟಿಯಾಗಿಲ್ಲ. ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಅದೇ ರೀತಿ ಈಗ ವಿವಾದ ಎದ್ದಿದೆ. ಪ್ರತಿಭಟನೆ ನಡೆಸುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆ ಹಕ್ಕನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಾಜಿ ಶಾಸಕ ಝಮೀರ್ ಅಹ್ಮದ್ ಅವರನ್ನು ಬಳ್ಳಾರಿಯಲ್ಲಿ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಯಾರೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ಕೆಲಸ ಮಾಡಬಾರದು. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News